ನವದೆಹಲಿ: ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸಬೇಕು ಎಂದು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಅರ್ಜಿಯನ್ನು ನಿರಾಕರಿಸಿರವ ಸುಪ್ರೀಂ ಕೋರ್ಟ್ ರಿಜಿಸ್ಟ್ರಾರ್, ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ದೆಹಲಿ ಮುಖ್ಯಮಂತ್ರಿ ಅವರಿಗೆ ಅನುಮತಿ ನೀಡಲಾಗಿದೆ. ಆದ್ದರಿಂದ ಈ ಅರ್ಜಿಯನ್ನು ಎತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಕೇಜ್ರಿವಾಲ್ ಅವರ ಮಧ್ಯಂತರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳುವ ಪ್ರಕರಣಗಳ ಪಟ್ಟಿಗೆ ಸೇರಿಸಲು ರಜಾಕಾಲದ ಪೀಠವು ಮಂಗಳವಾರ ನಿರಾಕರಿಸಿತ್ತು. ನ್ಯಾಯಮೂರ್ತಿಗಳಾದ ಜೆ.ಕೆ. ಮಾಹೇಶ್ವರಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಈ ಪೀಠದಲ್ಲಿ ಇದ್ದಾರೆ.
ತಾವು ಕೆಲವು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಬೇಕಿರುವ ಕಾರಣ, ಮಧ್ಯಂತರ ಜಾಮೀನಿನ ಅವಧಿಯನ್ನು ವಿಸ್ತರಿಸಬೇಕು ಎಂದು ಕೋರಿ ಕೇಜ್ರಿವಾಲ್ ಅವರು ಅರ್ಜಿ ಸಲ್ಲಿಸಿದ್ದರು. ಜೂನ್ 2ರ ಬದಲು ಜೂನ್ 9ಕ್ಕೆ ಜೈಲಿಗೆ ಮರಳಲು ಅವಕಾಶ ಕಲ್ಪಿಸಬೇಕು ಎಂದು ಅವರು ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.