ADVERTISEMENT

ಮತಾಂತರ ಪ್ರಕರಣ: ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 16 ಮೇ 2024, 15:44 IST
Last Updated 16 ಮೇ 2024, 15:44 IST
   

ನವದೆಹಲಿ: ಹಿಂದೂಗಳನ್ನು ಕ್ರೈಸ್ತರನ್ನಾಗಿ ಅಕ್ರಮವಾಗಿ ಮತಾಂತರಗೊಳಿಸಿದ ಆರೋಪದ ಅಡಿ ‘ಸ್ಯಾಮ್ ಹಿಗ್ಗಿನ್‌ಬಾಟಮ್ ಕೃಷಿ, ತಂತ್ರಜ್ಞಾನ ಮತ್ತು ವಿಜ್ಞಾನ ವಿಶ್ವವಿದ್ಯಾಲಯ’ದ ಕುಲಪತಿ ಹಾಗೂ ಇತರರ ವಿರುದ್ಧ ದಾಖಲಿಸಿದ ಎಫ್‌ಐಆರ್ ಆಧರಿಸಿ ಉತ್ತರ ಪ್ರದೇಶದ ವಿಚಾರಣಾ ನ್ಯಾಯಾಲಯದಲ್ಲಿ ನಡೆಯತ್ತಿರುವ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ಆರೋಪಿಗಳಿಗೆ ಬಂಧನದಿಂದ ರಕ್ಷಣೆ ಹಾಗೂ ಜಾಮೀನು ನೀಡಿರುವ ಸುಪ್ರೀಂ ಕೋರ್ಟ್‌, ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಯಲು ಅವಕಾಶ ಕೊಡಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಮಂಡಿಸಿದ್ದ ಕೋರಿಕೆಯನ್ನು ಒಪ್ಪಲಿಲ್ಲ.

‘ಎಫ್‌ಐಆರ್‌ಗಳ ವಿಚಾರವಾಗಿ ವಿಚಾರಣಾ ನ್ಯಾಯಾಲಯದಲ್ಲಿ ವಿಚಾರಣೆಯು ಮುಂದುವರಿಯಬಾರದು’ ಎಂದು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಅವರು ಇದ್ದ ವಿಭಾಗೀಯ ಪೀಠವು ಆದೇಶದಲ್ಲಿ ಹೇಳಿದೆ.

ADVERTISEMENT

ವಿಶ್ವವಿದ್ಯಾಲಯದ ಕುಲಪತಿ ರಾಜೇಂದ್ರ ಬಿಹಾರಿ ಲಾಲ್ ಮತ್ತು ಇತರರ ವಿರುದ್ಧದ ವಿಚಾರಣೆಗೆ ತಡೆ ನೀಡಬೇಕು ಎಂದು ಅವರ ಪರ ವಕೀಲರು ಮನವಿ ಮಾಡಿದ್ದರು. ಯಾವೊಬ್ಬ ಸಂತ್ರಸ್ತರ ಹೇಳಿಕೆಯನ್ನೂ ಪೊಲೀಸರು ದಾಖಲಿಸಿಲ್ಲ ಎಂದು ವಕೀಲರು ಪೀಠಕ್ಕೆ ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.