ನವದೆಹಲಿ: ಬಿಲ್ಕಿಸ್ ಬಾನೊ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಮಂದಿ ಅಪರಾಧಿಗಳ ಬಿಡುಗಡೆಗೆ ಸಂಬಂಧಿಸಿ ಈ ಹಿಂದೆ ನೀಡಿರುವ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಪಟ್ಟಿ ಮಾಡುವುದಾಗಿ ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಪಿ.ಎಸ್.ನರಸಿಂಹ ಮತ್ತು ದೀಪಾಂಕರ್ ದತ್ತಾ ಅವರಿದ್ದ ನ್ಯಾಯಪೀಠವು, ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡುವುದಾಗಿ ಬಿಲ್ಕಿಸ್ ಪರ ವಕೀಲೆ ಶೋಭಾ ಗುಪ್ತಾ ಅವರಿಗೆ ಹೇಳಿದೆ.
‘ಡಿಸೆಂಬರ್ 5 ರಂದು ತಾತ್ಕಾಲಿಕ ದಿನಾಂಕವಿದೆ, ಅಂದು ವಿಚಾರಣೆ ನಡೆಸಬಹುದೊ ಎಂಬುದನ್ನು ಪರಿಶೀಲಿಸುತ್ತೇನೆ’ ಎಂದು ಮುಖ್ಯನ್ಯಾಯಮೂರ್ತಿ ಅವರು ತಿಳಿಸಿದ್ದಾರೆ.
ಆರೋಪಿಗಳ ಕ್ಷಮಾಪಣೆ ಕುರಿತು ಗುಜರಾತ್ ಸರ್ಕಾರವೇ ನಿರ್ಧಾರ ಕೈಗೊಳ್ಳಲಿ ಎಂದು ಮೇ 13ರಂದು ಸುಪ್ರೀಂ ಕೋರ್ಟ್ ಆದೇಶ ನೀಡಿತ್ತು.
ತಮ್ಮ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೊ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು (ಮತ್ತೊಂದು ಅರ್ಜಿ) ಡಿಸೆಂಬರ್ 13ರಂದು ನ್ಯಾಯಮೂರ್ತಿಗಳಾದಅಜಯ್ ರಸ್ತೋಗಿ ಮತ್ತು ಬೇಲಾ ಎಂ.ತ್ರಿವೇದಿ ಅವರಿರುವ ನ್ಯಾಯಪೀಠವು ನಡೆಸಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.