ನವದೆಹಲಿ: ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ನಿರಾಕರಿಸಿ ನೀಡಿದ್ದ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಜುಲೈ 10ರಂದು ಪರಿಶೀಲಿಸಲಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐದು ಜನ ನ್ಯಾಯಮೂರ್ತಿಗಳಿರುವ ಪೀಠವು ಸಿಜೆಐ ಅವರ ಕೊಠಡಿಯಲ್ಲಿ, ತೀರ್ಪಿನ ಮರುಪರಿಶೀಲನೆ ಕೋರಿರುವ ಅರ್ಜಿಗಳ ಪರಿಶೀಲನೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಪೀಠದ ಇತರ ಸದಸ್ಯರಾದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಹಿಮಾ ಕೊಹ್ಲಿ, ಬಿ.ವಿ.ನಾಗರತ್ನಾ ಹಾಗೂ ಪಿ.ಎಸ್.ನರಸಿಂಹ ಅವರೂ ಉಪಸ್ಥಿತರಿರುವರು.
ಸುಪ್ರೀಂ ಕೋರ್ಟ್‌ನ ವಿಧಿವಿಧಾನಗಳ ಪ್ರಕಾರ, ತೀರ್ಪಿನ ಪುನರ್ ಪರಿಶೀಲನಾ ಅರ್ಜಿಯನ್ನು ಸಂಬಂಧಪಟ್ಟ ನ್ಯಾಯಮೂರ್ತಿಗಳು ತಮ್ಮ ಕೊಠಡಿಯಲ್ಲಿಯೇ ಪರಿಶೀಲಿಸುತ್ತಾರೆ.
ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ನಿರಾಕರಿಸಿ ಸುಪ್ರೀಂ ಕೋರ್ಟ್ ಕಳೆದ ವರ್ಷ ಅಕ್ಟೋಬರ್ 17ರಂದು ತೀರ್ಪು ನೀಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.