ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ವಿವಾದಾತ್ಮಕ ನಿರ್ಧಾರದ ಸಾಂವಿಧಾನಿಕ ಸಿಂಧುತ್ವ ಕುರಿತು ಸುಪ್ರೀಂ ಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಲಿದೆ. ಈ ಹಿನ್ನೆಲೆಯಲ್ಲಿ, ಕಾಶ್ಮೀರ ಕಣಿವೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆ ಕೈಗೊಂಡಿದೆ.
ಇದೇ ವೇಳೆ, ಜಮ್ಮು ಮತ್ತು ಕಾಶ್ಮೀರದ ಗುಪ್ಕಾರ್ ಪಕ್ಷಗಳು (ಪಿಎಜಿಡಿ) ಸುಪ್ರೀಂ ಕೋರ್ಟ್‌ನಿಂದ ವಿಶೇಷ ಸ್ಥಾನಮಾನ ಪುನರ್‌ಸ್ಥಾಪಿಸುವ ಕುರಿತು ತೀರ್ಪು ಬರುವ ಭರವಸೆಯನ್ನು ವ್ಯಕ್ತಪಡಿಸಿವೆ. ಬಿಜೆಪಿಯು, ‘ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಯಾವುದೇ ರಾಜಕೀಯ ಮಾಡಬಾರದು. ಪ್ರತಿಯೊಬ್ಬರೂ ತೀರ್ಪನ್ನು ಗೌರವಿಸಬೇಕು’ ಎಂದು ಮನವಿ ಮಾಡಿದೆ.
‘ಕಣಿವೆಯಲ್ಲಿ ಸದಾ ಶಾಂತಿ ಕಾಪಾಡಲು ನಾವು ಕರ್ತವ್ಯ ಬದ್ಧರಾಗಿದ್ದೇವೆ. ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುತ್ತಿದ್ದೇವೆ. ಕಾಶ್ಮೀರದಲ್ಲಿ ಶಾಂತಿ ಕದಡದಂತೆ ನೋಡಿಕೊಳ್ಳುತ್ತೇವೆ’ ಎಂದು ಕಾಶ್ಮೀರ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ವಿ.ಕೆ. ಬಿರ್ದಿ ‘ಪಿಟಿಐ’ ಸುದ್ದಿಸಂಸ್ಥೆಗೆ ತಿಳಿಸಿದರು.
ಕಳೆದ ಎರಡು ವಾರಗಳಲ್ಲಿ 10 ಕಣಿವೆ ಜಿಲ್ಲೆಗಳಲ್ಲಿ ಭದ್ರತಾ ಪರಿಶೀಲನಾ ಸಭೆಗಳನ್ನು ನಡೆಸಿರುವ ಬಿರ್ದಿ ಅವರು, ಸೋಮವಾರ ಯಾವೆಲ್ಲ ರೀತಿ ಭದ್ರತೆ ಕೈಗೊಳ್ಳಲಾಗಿದೆ ಎನ್ನುವ ವಿವರ ಬಹಿರಂಗಪಡಿಸಲು ನಿರಾಕರಿಸಿದರು.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ, ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿ.ಆರ್. ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಸಂವಿಧಾನ ಪೀಠವು ತೀರ್ಪು ಪ್ರಕಟಿಸಲಿದೆ.
ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ 370ನೇ ವಿಧಿ ಅಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ 2019ರ ಆಗಸ್ಟ್ 5ರಂದು ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದ ಸಂವಿಧಾನ ಪೀಠವು, 16 ದಿನಗಳ ಕಾಲ ವಾದ– ಪ್ರತಿವಾದ ಆಲಿಸಿ ಸೆ. 5ರಂದು ತೀರ್ಪು ಕಾಯ್ದಿರಿಸಿತ್ತು.
ಕೇಂದ್ರ ಸರ್ಕಾರದ ನಿರ್ಧಾರ ಸಮರ್ಥಿಸಿ ಅಟಾರ್ನಿ ಜನರಲ್ ಆರ್. ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಹರೀಶ್ ಸಾಳ್ವೆ, ರಾಕೇಶ್ ದ್ವಿವೇದಿ, ವಿ. ಗಿರಿ ಮತ್ತು ಇತರರು ವಾದಿಸಿದ್ದಾರೆ.
ಹಿರಿಯ ವಕೀಲರಾದ ಕಪಿಲ್ ಸಿಬಲ್, ರಾಜೀವ್ ಧವನ್, ಗೋಪಾಲ್ ಸುಬ್ರಮಣಿಯಂ, ದುಷ್ಯಂತ್ ದವೆ, ಜಾಫರ್ ಷಾ, ಗೋಪಾಲ್ ಶಂಕರನಾರಾಯಣನ್ ಅರ್ಜಿದಾರರ ಪರ ವಾದ ಮಂಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.