ನವದಹೆಲಿ: ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಾಹನದ ಮೇಲೆ ದಾಳಿ ಯತ್ನಕ್ಕೆ ಸಂಬಂಧಿಸಿದಂತೆ ಸಿಪಿಎಂ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ವಾಗ್ದಾಳಿ ನಡೆಸಿದ್ದಾರೆ.
ಕೇರಳ ಗವರ್ನರ್ ಆರಿಫ್ ಮೊಹಮ್ಮದ್ ಖಾನ್ ಅವರ ಕಾರಿನ ಮೇಲೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಗೂಂಡಾಗಳು ನಡೆಸಿದ ದಾಳಿ ಅತ್ಯಂತ ಹೇಯ ಕೃತ್ಯ. ಈ ವೇಳೆ ರಾಜ್ಯಪಾಲರ ಆಕ್ರೋಶ ಅರ್ಥಮಾಡಿಕೊಳ್ಳಬಹುದಾಗಿದೆ ಎಂದು ಅವರು ಹೇಳಿದ್ದಾರೆ.
ಕಮ್ಯುನಿಸ್ಟ್ ಸರ್ಕಾರದ ಆಡಳಿತದಲ್ಲಿ ಪೊಲೀಸರು ಕಾನೂನುಬಾಹಿರ ಚಟುವಟಿಕೆಯ ಏಜೆಂಟರಾಗಿ ವರ್ತಿಸುತ್ತಿದ್ದಾರೆ. ರಾಜ್ಯಪಾಲರ ಮೇಲೆ ಹಲ್ಲೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅವರು ದೂರಿದ್ದಾರೆ.
ಅದೇ ಹೊತ್ತಿಗೆ ಮುಖ್ಯಮಂತ್ರಿ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಲು ಕುಮ್ಮಕ್ಕು ನೀಡಲಾಗಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಅವರು ಹೇಳಿದ್ದಾರೆ.
ಹಲ್ಲೆಗೆ ಪಿತೂರಿ: ಕೇರಳ ಸಿಎಂ ಮೇಲೆ ರಾಜ್ಯಪಾಲ ಆರೋಪ
ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ನನ್ನ ಮೇಲೆ ಹಲ್ಲೆಗೆ ಪಿತೂರಿ ನಡೆಸಿದ್ದಾರೆ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆರೋಪಿಸಿದ್ದಾರೆ.
ಆರಿಫ್ ಅವರಿದ್ದ ವಾಹನವನ್ನು ಸಿಪಿಐ(ಎಂ) ಪಕ್ಷದ ವಿದ್ಯಾರ್ಥಿ ಘಟಕವಾದ ಎಸ್‌ಎಫ್‌ಐ ಕಾರ್ಯಕರ್ತರು ತಡೆದು ಕಪ್ಪು ಬಾವುಟವನ್ನು ಪ್ರದರ್ಶಿಸಿದ್ದರು. ಈ ವೇಳೆ ಕಾರಿನಿಂದ ಹೊರಗಿಳಿದು ಆರಿಫ್ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.