ಭೋಪಾಲ್: ರಾಷ್ಟ್ರಪತಿ ಚುನಾವಣೆಗೆಎನ್‌ಡಿಎ ಅಭ್ಯರ್ಥಿಯನ್ನಾಗಿ ಜಾರ್ಖಂಡ್ ಮೂಲದ ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ನೃತ್ಯ ಮಾಡುವ ಮೂಲಕ ಸಂಭ್ರಮಿಸಿದ್ದಾರೆ.
ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಶಿವರಾಜ್ ಸಿಂಗ್ ಚೌಹಾಣ್, ‘ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿರುವ ಪ್ರಧಾನಿ ಮೋದಿ ಜೀ ಸೇರಿದಂತೆ ರಾಷ್ಟ್ರೀಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಸಂತಸದ ಕ್ಷಣಗಳನ್ನು ಬುಡಕಟ್ಟು ಸಹೋದರ –ಸಹೋದರಿಯರೊಂದಿಗೆ ಜಾನಪದ ನೃತ್ಯ ಮಾಡುವ ಮೂಲಕ ಆನಂದಿಸಿದ್ದೇನೆ’ ಎಂದು ಬರೆದುಕೊಂಡಿದ್ದಾರೆ.
ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ಜುಲೈ 18 ರಂದು ಮತದಾನ ನಡೆಯಲಿದೆ. ಎನ್‌ಡಿಎ ಅಧ್ಯಕ್ಷೀಯ ಅಭ್ಯರ್ಥಿಯಾಗಿ ಮುರ್ಮು ಅವರು ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಲಿದ್ದಾರೆ. ಚುನಾವಣೆಯಲ್ಲಿ ಹಿನ್ನೆಲೆಯಲ್ಲಿ ಮುರ್ಮು ಅವರು ಪ್ರಧಾನಿ ಮೋದಿ ಅವರನ್ನು ಗುರುವಾರ ಭೇಟಿಯಾಗಿ ಮಾತುಕತೆ ನಡೆಸಿದ್ದರು.
‘ಮುರ್ಮು ಅವರು ಭಾರತದ ಶ್ರೇಷ್ಠ ರಾಷ್ಟ್ರಪತಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ‘ಮುರ್ಮು ಅವರು ತಮ್ಮ ಜೀವನವನ್ನು ಸಮಾಜ ಸೇವೆಗಾಗಿ, ಬಡವರು, ದೀನ–ದಲಿತರ ಸಬಲೀಕರಣಕ್ಕಾಗಿ ಮುಡಿಪಾಗಿಟ್ಟಿದ್ದಾರೆ. ಜತೆಗೆ ಉತ್ತಮ ಆಡಳಿತಾತ್ಮಕ ಅನುಭವವನ್ನು ಹೊಂದಿದ್ದಾರೆ’ ಎಂದು ಟ್ವೀಟ್ ಮಾಡಿದ್ದರು.
ವಿರೋಧ ಪಕ್ಷಗಳ ಜಂಟಿ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ಜೂನ್ 27ರಂದು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.