ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಹಾಗೂ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು (ಮಂಗಳವಾರ) ಕೇಂದ್ರ ಕೃಷಿ ಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಮೋದಿ ಸಂಪುಟದಲ್ಲಿ ಕೃಷಿ ಖಾತೆಯ ಜತೆಗೆ ಗ್ರಾಮೀಣಾಭಿವೃದ್ಧಿ ಸಚಿವರಾಗಿಯೂ ಮುಂದುವರಿಯಲಿದ್ದಾರೆ.
65 ವರ್ಷದ ಚೌಹಾಣ್ ಮಧ್ಯಪ್ರದೇಶದಲ್ಲಿ ನಾಲ್ಕು ಬಾರಿ ಸಿಎಂ ಹುದ್ದೆ ಅಲಂಕರಿಸಿದ್ದರು. ಸುದೀರ್ಘ ರಾಜಕೀಯ ಅನುಭವ ಹೊಂದಿದ್ದಾರೆ.
‘ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಪ್ರಧಾನಿ ಮೋದಿ ಅವರ ಸಂಕಲ್ಪವನ್ನು ಸಾಕಾರಗೊಳಿಸಲು ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ನಮ್ಮ ಮೊದಲ ಆದ್ಯತೆಯಾಗಿದೆ‘ ಎಂದು ಚೌಹಾಣ್ ಭರವಸೆ ನೀಡಿದ್ದಾರೆ..
ಮಾರ್ಚ್ 5, 1959ರಲ್ಲಿ ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯ ಹಳ್ಳಿಯೊಂದರ ಕೃಷಿ ಕುಟುಂಬದಲ್ಲಿ ಜನಿಸಿದ ಚೌಹಾಣ್, 13 ವರ್ಷವಾಗಿದ್ದಾಗಲೇ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಸೇರಿದ್ದರು.
1990ರಲ್ಲಿ ಬುಧ್ನಿ ಕ್ಷೇತ್ರದಿಂದ ಮಧ್ಯಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದರು. 1991 ರಲ್ಲಿ ವಿದಿಶಾ ಕ್ಷೇತ್ರದಿಂದ ಸಂಸದರಾಗಿ ಲೋಕಸಭೆ ಪ್ರವೇಶಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.