ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ನಡೆದ ರಾಜ್ಯಸಭೆ ಚುನಾವಣೆ ವೇಳೆ ಕಾಂಗ್ರೆಸ್‌ನ ಆರು ಶಾಸಕರು ಬಿಜೆಪಿ ಪರವಾಗಿ ಮತ ಚಲಾಯಿಸಿದ್ದರು. ಇದರ ಬೆನ್ನಲ್ಲೇ ಪಕ್ಷದಲ್ಲಿ ಉಂಟಾಗಿರುವ ಬಿಕ್ಕಟ್ಟು ಶಮನಗೊಳಿಸಲು ಕಾಂಗ್ರೆಸ್ ಮುಂದಾಗಿದೆ.
ಬಿಜೆಪಿಗೆ ಮತ ಚಲಾಯಿಸಿರುವ ಆರು ಶಾಸಕರು ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರ ಆಡಳಿತದ ಬಗ್ಗೆ ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಮಾತುಕತೆ ನಡೆಸುವಂತೆ ಹಿರಿಯ ನಾಯಕ ಭೂಪಿಂದರ್ ಸಿಂಗ್ ಹೂಡಾ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಯೋಜಿಸಿದ್ದಾರೆ.
ಹರಿಯಾಣದ ಮಾಜಿ ಮುಖ್ಯಮಂತ್ರಿ ಹೂಡಾ ಮತ್ತು ಕರ್ನಾಟಕದ ಉಪ ಮುಖ್ಯಮಂತ್ರಿ ಶಿವಕುಮಾರ್ ಅವರು ಇಂದು (ಬುಧವಾರ) ಬೆಳಗ್ಗೆಯೇ ಶಿಮ್ಲಾ ತಲುಪಲಿದ್ದು, ಸರ್ಕಾರದ ಅಸ್ತಿತ್ವಕ್ಕೆ ಎದುರಾಗಬಹುದಾದ ಸವಾಲುಗಳ ಬಗ್ಗೆ ಮಾಹಿತಿ ಪಡೆಯಲಿದ್ದಾರೆ ಎನ್ನಲಾಗಿದೆ.
ಆರು ಶಾಸಕರು ರಾಜ್ಯಸಭೆ ಚುನಾವಣೆಗೆ ಮತ ಚಲಾಯಿಸಿದ ಬಳಿಕ ಶಿಮ್ಲಾದಿಂದ ಹರಿಯಾಣಕ್ಕೆ ತೆರಳಿದ್ದಾರೆ. ಅವರೆಲ್ಲ ಬಿಜೆಪಿಯವರ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಜೆಪಿ ನಾಯಕರು ಶಾಸಕಾಂಗ ಪಕ್ಷದ ನಾಯಕ ಜೈರಾಮ್ ಠಾಕೂರ್ ನೇತೃತ್ವದಲ್ಲಿ ಇಂದು ರಾಜ್ಯಪಾಲರನ್ನು ಭೇಟಿಯಾಗುವ ಯೋಜನೆಯಲ್ಲಿದ್ದಾರೆ. ಸರ್ಕಾರದ ವಿಶ್ವಾಸಮತ ಸಾಬೀತಿಗೆ ಬಿಜೆಪಿ ಒತ್ತಾಯಿಸಲಿದೆ ಎಂದು ವರದಿಯಾದ ಬೆನ್ನಲ್ಲೇ ಹೂಡಾ ಹಾಗೂ ಶಿವಕುಮಾರ್ ಅವರನ್ನು ಕಾಂಗ್ರೆಸ್ ಅಖಾಡಕ್ಕಿಳಿಸಿದೆ.
ಕಾಂಗ್ರೆಸ್ ಮುಖಭಂಗ
68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಯಲ್ಲಿ ಕಾಂಗ್ರೆಸ್ 40 ಹಾಗೂ ಬಿಜೆಪಿ 25 ಶಾಸಕರನ್ನು ಹೊಂದಿದ್ದರೆ, ಬಿಜೆಪಿ 25 ಶಾಸಕರನ್ನು ಹೊಂದಿದೆ. ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷೇತರ ಶಾಸಕರು ಇದ್ದಾರೆ.
ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆಯ ಏಕೈಕ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುಖಭಂಗ ಅನುಭವಿಸಿದೆ. ಪಕ್ಷದ ಅತೃಪ್ತ ಶಾಸಕರು ಅಡ್ಡ ಮತದಾನ ಮಾಡಿದ ಪರಿಣಾಮ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಭಿಷೇಕ್ ಮನು ಸಿಂಘ್ವಿ ಮತ್ತು ಬಿಜೆಪಿಯ ಹರ್ಷ ಮಹಾಜನ್ ನಡುವೆ ಪೈಪೋಟಿ ಎದುರಾಗಿತ್ತು. ಇಬ್ಬರೂ 34–34 ಮತ ಗಳಿಸಿದ್ದರು. ಹೀಗಾಗಿ, ವಿಜೇತರನ್ನು ಘೋಷಿಸಲು ಚೀಟಿ ಎತ್ತಲಾಯಿತು. ಆಗ ಮಹಾಜನ್‌ಗೆ ಅದೃಷ್ಟ ಒಲಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.