ಗ್ಯಾಂಗ್ಟಕ್: ಜೂನ್ 10ರಂದು ಸಿಕ್ಕಿಂನ ಮುಖ್ಯಮಂತ್ರಿಯಾಗಿ ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾದ (ಎಸ್‌ಕೆಎಂ) ಮುಖ್ಯಸ್ಥ ಪ್ರೇಮ್ ಸಿಂಗ್ ತಮಾಂಗ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಪಕ್ಷದ ನಾಯಕರು ಶುಕ್ರವಾರ ತಿಳಿಸಿದ್ದಾರೆ.
ಸತತ ಎರಡನೇ ಬಾರಿಗೆ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿದ್ದಾರೆ.
‘ಜೂನ್ 7ರಂದು ಬೆಳಿಗ್ಗೆ ಮಿಂಟೊಕ್‌ಗ್ಯಾಂಗ್‌ನಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಎಸ್‌ಕೆಎಂ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಯಿತು. ಶನಿವಾರ ದೆಹಲಿಯಲ್ಲಿ ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಪ್ರಮಾಣವಚನ ಸ್ವೀಕರಿಸಲಿದ್ದು, ಆ ಕಾರ್ಯಕ್ರಮದಲ್ಲಿ ತಮಾಂಗ್ ಭಾಗಿಯಾಗಲಿದ್ದಾರೆ. ಶನಿವಾರ ತಮಾಂಗ್ ದೆಹಲಿಗೆ ತೆರಳುವ ಸಾಧ್ಯತೆ ಇದೆ’ ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ.
‘ತಮಾಂಗ್ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜೂನ್ 10ರಂದು ಪಲ್‌ಜೋರ್ ಸ್ಟೇಡಿಯಂನಲ್ಲಿ ನಡೆಯಲಿದೆ. ಶಾಸಕಾಂಗ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಲು ಸರ್ವಾನುಮತದಿಂದ ತೀರ್ಮಾನಿಸಲಾಯಿತು’ ಎಂದು ಪಕ್ಷದ ಇನ್ನೊಬ್ಬ ನಾಯಕರು ಹೇಳಿದ್ದಾರೆ.
ಕೆಲ ದಿನಗಳ ಹಿಂದಷ್ಟೇ ನಡೆದ ಚುನಾವಣೆಯಲ್ಲಿ ರಾಜ್ಯದ 32 ವಿಧಾನಸಭಾ ಕ್ಷೇತ್ರಗಳಳ ಪೈಕಿ 31ರಲ್ಲಿ ಎಸ್‌ಕೆಎಂ ಜಯಭೇರಿ ಬಾರಿಸಿತ್ತು. ರಾಜ್ಯದ 1 ಲೋಕಸಭಾ ಕ್ಷೇತ್ರವನ್ನೂ ಎಸ್‌ಕೆಎಂ ಗೆದ್ದುಕೊಂಡಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.