ದುರ್ಗ್ (ಛತ್ತೀಸ್‌ಗಢ): ಖಾಸಗಿ ಬಸ್‌ವೊಂದು ಗಣಿ ಪ್ರದೇಶದ ಗುಂಡಿಗೆ ಬಿದ್ದ ಪರಿಣಾಮ 12 ಜನರು ಮೃತಪಟ್ಟಿದ್ದು, 14 ಜನ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ 30ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದ ಬಸ್, ದುರ್ಗ್ ಜಿಲ್ಲೆಯ ಖಾಪ್ರಿ ಬಳಿ ಆಯ ತಪ್ಪಿ ಗುಂಡಿಗೆ ಉರುಳಿದೆ. ಕೆಲಸ ಮುಗಿಸಿಕೊಂಡು ಮನೆಗೆ ಹಿಂದಿರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಮೂವರು ಮಹಿಳೆಯರು ಸೇರಿದಂತೆ 12 ಜನರು ಮೃತಪಟ್ಟಿದ್ದು, 14 ಜನ ಗಾಯಗೊಂಡಿದ್ದಾರೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ಹೇಳಿದ್ದಾರೆ.
ಸ್ಥಳಕ್ಕೆ ಧಾವಿಸಿದ ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ ಎಂದು ದುರ್ಗ್ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಶುಕ್ಲಾ ಮಾಹಿತಿ ನೀಡಿದರು.
ಗಾಯಗೊಂಡವರನ್ನು ರಾಯ್‌ಪುರದ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ (ಏಮ್ಸ್) ದಾಖಲಿಸಲಾಗಿದೆ.
ಈ ಘಟನೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡು, ಬಸ್ ಅಪಘಾತದಲ್ಲಿ ಮೃತಪಟ್ಟ ಕುಟುಂಬಕ್ಕೆ ದೇವರು ಧೈರ್ಯದಿಂದ ಇರುವ ಶಕ್ತಿ ನೀಡಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲು ಕೇಂದ್ರ ಸರ್ಕಾರ ಅಗತ್ಯ ನೆರವು ನೀಡುವುದಾಗಿ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಛತ್ತೀಸ್‌ಗಢದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡು ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.