ADVERTISEMENT

ಉತ್ತರ ಪ್ರದೇಶ: ಅಮಾನುಷವಾಗಿ ಥಳಿಸಿ ಸಮಾಜವಾದಿ ಪಕ್ಷದ ನಾಯಕನ ಹತ್ಯೆ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2022, 5:40 IST
Last Updated 20 ಏಪ್ರಿಲ್ 2022, 5:40 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಲಖನೌ: ಇಲ್ಲಿನ ಪಿಜಿಐ ಪೊಲೀಸ್ ಠಾಣಾ ವ್ಯಾಪ್ತಿಯ ರೇವ್ತಾಪುರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡರೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಿಸದೆ ಮಂಗಳವಾರ ರಾತ್ರಿ ಮೃತಪಟ್ಟಿದ್ದಾರೆ.

ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ರೋಹಿತ್(26) ಎಂಬಾತನ ಮೇಲೆ ಸಚಿನ್ ಮತ್ತು ಆತನ ಸಹಚರರು ಹಲ್ಲೆ ನಡೆಸಿದ್ದಾರೆ. ಕಬ್ಬಿಣದ ರಾಡ್‌‍‌ಗಳು, ಹರಿತವಾದ ಆಯುಧಗಳು ಮತ್ತು ಲಾಠಿಗಳಿಂದ ತೀವ್ರವಾಗಿ ಥಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿಸಿದ್ದಾರೆ.

ADVERTISEMENT

ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಸಚಿನ್ ಮತ್ತು ಐವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೊಲೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರೋಹಿತ್, ಎಸ್‌ಪಿಯ ಯುವ ಘಟಕದ ಮಾಜಿ ಜಿಲ್ಲಾ ಕಾರ್ಯದರ್ಶಿಯಾಗಿದ್ದು, ಆರು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು.

ಸಚಿನ್, ಶಿವಕುಮಾರ್ ಮತ್ತು ಇತರರು ತಮ್ಮ ಮಗನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ ಎಂದು ಮೃತರ ತಾಯಿ ಊರ್ಮಿಳಾ ದೇವಿ ಪೊಲೀಸರಿಗೆ ತಿಳಿಸಿದ್ದಾರೆ. ಸಚಿನ್‌ಗೆ ರೋಹಿತ್‌ ಜೊತೆ ಹಳೆ ವೈಷಮ್ಯವಿದ್ದು, ಹಲವು ಬಾರಿ ಬೆದರಿಕೆ ಹಾಕಿದ್ದ ಎಂದು ಅವರು ಆರೋಪಿಸಿದ್ದಾರೆ.

ಆರೋಪಿಗಳನ್ನು ಪತ್ತೆ ಹಚ್ಚಲು ಮತ್ತು ಬಂಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕಂಟೋನ್‌ಮೆಂಟ್ ಸಹಾಯಕ ಪೊಲೀಸ್ ಕಮಿಷನರ್ (ಎಸಿಪಿ) ಅರ್ಚನಾ ಸಿಂಗ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.