ಕೊಚ್ಚಿ: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಐವರು ಆರೋಪಿಗಳನ್ನು ಇಲ್ಲಿನ ಎನ್ಐಎ ವಿಶೇಷ ನ್ಯಾಯಾಲಯವು ಬುಧವಾರದವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್ಐಎ) ಕಸ್ಟಡಿಗೆ ಒಪ್ಪಿಸಿದೆ.
ಅಬ್ದು ಪಿಟಿ, ಶರಾಫುದ್ದಿನ್ ಕೆ.ಟಿ, ಮುಹಮ್ಮದ್ ಶಫೀಕ್, ಹಜ್ಮದ್ ಅಲಿ ಮತ್ತು ಮುಹಮ್ಮದ್ ಅಲಿ ಅವರನ್ನು ಮೂರು ದಿನಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆಯ ವಶಕ್ಕೆ ಒಪ್ಪಿಸಲಾಗಿದೆ. ಆರೋಪಿಗಳು ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಗುರುವಾರ ನಡೆಸಲಿದೆ. ಪ್ರಕರಣದ ಮುಖ್ಯ ಆರೋಪಿ ಸ್ವಪ್ನಾ ಸುರೇಶ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ನಿಗದಿಪಡಿಸಲಾಗಿದೆ.
ಕಸ್ಟಮ್ಸ್ ಇಲಾಖೆಯಿಂದ ದೊರೆಯಬೇಕಿರುವ ದತ್ತಾಂಶಗಳು ಇನ್ನೂ ದೊರೆತಿಲ್ಲ. ಅದಕ್ಕೆ ಸ್ವಲ್ಪ ಸಮಯ ಬೇಕಾಗಬಹುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆಯ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ರಾಜತಾಂತ್ರಿಕ ಮಾರ್ಗಗಳ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪಗಳಿಗೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ, ಜಾರಿ ನಿರ್ದೇಶನಾಲಯ (ಇ.ಡಿ) ಹಾಗೂ ಕಸ್ಟಮ್ಸ್ ಇಲಾಖೆ ತನಿಖೆ ನಡೆಸುತ್ತಿವೆ.
₹14.82 ಕೋಟಿ ಮೌಲ್ಯದ 30ಕೆ.ಜಿ ಚಿನ್ನವನ್ನು ರಾಜತಾಂತ್ರಿಕ ಮಾರ್ಗದ ಮೂಲಕ ಕಳ್ಳ ಸಾಗಣೆ ಮಾಡುತ್ತಿರುವುದನ್ನು ತಿರುವನಂತಪುರದಲ್ಲಿ ಜುಲೈ 5ರಂದು ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ಪತ್ತೆ ಮಾಡಿದ್ದರು. ಇದರೊಂದಿಗೆ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಕೇರಳ ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳೂ ಭಾಗಿಯಾಗಿದ್ದಾರೆ ಎಂಬ ಆರೋಪ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.