ನವದೆಹಲಿ: ತಿರುಪತಿ ಲಡ್ಡು ಪ್ರಸಾದ ತಯಾರಿಕೆಯಲ್ಲಿ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಪತ್ತೆಯಾಗಿದೆ ಎಂಬ ಆರೋಪದ ಕುರಿತು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸುವಂತೆ ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸೋಮವಾರ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಸಿದ್ದಾರೆ.
ಲಡ್ಡುಗಳನ್ನು ತಯಾರಿಸಲು ಬಳಸುವ ತುಪ್ಪದ ಮೂಲ ಮತ್ತು ಮಾದರಿಯ ಬಗ್ಗೆ ವಿವರವಾದ ವರದಿಯನ್ನು ಸಲ್ಲಿಸಲು ಆಂಧ್ರಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆಯೂ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. 'ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಿತ ತುಪ್ಪ ಬಳಸಲಾಗಿದೆ ಎಂಬ ಸಿಎಂ ಚಂದ್ರಬಾಬು ನಾಯ್ಡು ಅವರ ಆಧಾರರಹಿತ ಆರೋಪದ ಬಗ್ಗೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನ ಕೋರಿ ಇಂದು ನಾನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದೇನೆ' ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.
ಇವರಲ್ಲದೇ ರಾಜ್ಯಸಭಾ ಸದಸ್ಯ ಹಾಗೂ ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಮಾಜಿ ಅಧ್ಯಕ್ಷ ವೈ.ವಿ ಸುಬ್ಬಾ ರೆಡ್ಡಿ ಅವರು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸ್ವತಂತ್ರ ಸಮಿತಿಯಿಂದ ತನಿಖೆ ನಡೆಸಬೇಕೆಂದು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
'ಲಡ್ಡು ತಯಾರಿಸಲು, ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು' ಎಂದು ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಹೇಳಿಕೆ ನೀಡಿದ್ದರು. ಈ ಆರೋಪಗಳ ಕುರಿತು ಪ್ರತಿಕ್ರಿಯಿಸಿದ್ದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ, 'ನಾಯ್ಡು ರಾಜಕೀಯ ಲಾಭಕ್ಕಾಗಿ ದೇವರನ್ನು ಬಳಸಿಕೊಳ್ಳುತ್ತಿದ್ದಾರೆ' ಎಂದು ಆರೋಪಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.