ನವದೆಹಲಿ: 2016ರ ₹1000 ಮತ್ತು ₹500 ಮುಖಬೆಲೆಯ ನೋಟುಅಮಾನ್ಯೀಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ(ಆರ್‌ಬಿಐ) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.
ಕೇಂದ್ರ ಸರ್ಕಾರದ ನೋಟು ಅಮಾನ್ಯೀಕರಣದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತಾದ ತೀರ್ಪು ಕಾಯ್ದಿರಿಸಿರುವ ನ್ಯಾಯಮೂರ್ತಿ ಎಸ್.ಎ. ನಜೀರ್ ನೇತೃತ್ವದ ಸುಪ್ರೀಂ ಕೋರ್ಟ್‌ನ ಐವರು ನ್ಯಾಯಾಧೀಶರ ಸಂವಿಧಾನ ಪೀಠ, ಹಿರಿಯ ವಕೀಲರಾದ ಪಿ. ಚಿದಂಬರಂ, ಶ್ಯಾಮ್ ದಿವಾನ್, ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಸೇರಿದಂತೆ ಸರ್ಕಾರ, ಆರ್‌ಬಿಐ, ಅರ್ಜಿದಾರರ ಪರ ವಕೀಲರ ವಾದಗಳನ್ನು ಆಲಿಸಿತು.
‘ವಕೀಲರ ವಾದಗಳನ್ನು ಆಲಿಸಲಾಗಿದ್ದು, ತೀರ್ಪನ್ನು ಕಾಯ್ದಿರಿಸಲಾಗಿದೆ. ನೋಟು ಅಮಾನ್ಯೀಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಮತ್ತು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಸೂಚಿಸಲಾಗಿದೆ’ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಎ.ಎಸ್. ಬೋಪಣ್ಣ, ವಿ. ರಾಮಸುಬ್ರಮಣಿಯನ್ ಮತ್ತು ಬಿ.ವಿ. ನಾಗರತ್ನ ಅವರನ್ನೊಳಗೊಂಡ ಪೀಠ ಹೇಳಿದೆ.
ನವೆಂಬರ್ 8, 2016ರಲ್ಲಿ ಕೇಂದ್ರ ಸರ್ಕಾರ ಘೋಷಿಸಿದ ನೋಟು ಅಮಾನ್ಯೀಕರಣ ನಿರ್ಧಾರ ಪ್ರಶ್ನಿಸಿ ಸಲ್ಲಿಕೆಯಾಗಿರುವ 58 ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ನಡೆಸುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.