ADVERTISEMENT

ಕಾವೇರಿ ವಿವಾದ: ತ.ನಾಡಿಗೆ ನೀರು ಹರಿಸಲು ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2023, 6:18 IST
Last Updated 21 ಸೆಪ್ಟೆಂಬರ್ 2023, 6:18 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶದಂತೆಯೇ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ರಾಜ್ಯಕ್ಕೆ ಸುಪ್ರೀಂ ಕೋರ್ಟ್‌ನ ತ್ರಿಸದಸ್ಯ ಪೀಠ ಗುರುವಾರ ನಿರ್ದೇಶನ ನೀಡಿದೆ.

ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂಬ ರಾಜ್ಯದ ಮನವಿಯನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಲಿಲ್ಲ. ಜತೆಗೆ ಉಭಯ ರಾಜ್ಯಗಳ ರೈತರು ತಮ್ಮ ವಾದವನ್ನೂ ಆಲಿಸಲು ಕೋರಿದ್ದ ಅರ್ಜಿಯನ್ನು ಪುರಸ್ಕರಿಸಲೂ ಪೀಠ ನಿರಾಕರಿಸಿತು.

ADVERTISEMENT

ಬಳಿಕ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಗಳನ್ನು ನಡೆಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದೂ ಸೂಚಿಸಿತು. ಸುಪ್ರೀಂ ಕೋರ್ಟ್‌ನ ಈ ನಿರ್ದೇಶನದಂತೆ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ ನೀರನ್ನು ಕರ್ನಾಟಕ ಹರಿಸಬೇಕಿದೆ.

ಸೆ. 13 ರಿಂದ ಮುಂದಿನ 15 ದಿನಗಳವರೆಗೆ 5 ಸಾವಿರ ಕ್ಯೂಸೆಕ್ ತಮಿಳುನಾಡಿಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿತ್ತು. ಇದಕ್ಕೆ ತಡೆ ನೀಡುವಂತೆ ರಾಜ್ಯ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿತ್ತು.

ಕಾವೇರಿ ಹಾಗೂ ಕೃಷ್ಣಾ ಕಣಿವೆಯಲ್ಲಿ ಭಾರಿ ನೀರಿನ ಕೊರತೆ ಕಾಣಿಸಿಕೊಂಡಿದ್ದು, ಹೀಗಾಗಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಈಗಾಗಲೇ ಪ್ರಮಾಣಪತ್ರ ಸಲ್ಲಿಸಿತ್ತು.

ಕಾವೇರಿ ಜಲಾನಯನ ಪ್ರದೇಶದಲ್ಲಿ ಹೆಚ್ಚುತ್ತಿರುವ ಮತ್ತು ವಿಸ್ತರಿಸುತ್ತಿರುವ ಬರದ ತೀವ್ರತೆಯನ್ನು ಗಮನಿಸಿ, ಕುಡಿಯುವ ನೀರಿನ ಅಗತ್ಯತೆಗಳು ಮತ್ತು ನೀರಾವರಿಯ ಕನಿಷ್ಠ ಅಗತ್ಯತೆಗಳಿಗೆ ನೀರಿನ ಅವಶ್ಯಕತೆ ಇರುವ ಹಿನ್ನೆಲೆಯಲ್ಲಿ ಜಲಾಶಯಗಳಿಗೆ ಒಳಹರಿವು ಸುಧಾರಿಸದ ಹೊರತು ನೀರನ್ನು ಬಿಡುಗಡೆ ಮಾಡುವ ಸ್ಥಿತಿಯಲ್ಲಿಲ್ಲ ಎಂದು ಕರ್ನಾಟಕವು ಪ್ರಾಧಿಕಾರಕ್ಕೆ ತಿಳಿಸಿತ್ತು.

ಪ್ರತಿಯಾಗಿ ತಮಿಳುನಾಡು, 6,500 ಕ್ಯೂಸೆಕ್ ಬಾಕಿಯನ್ನು ಒಳಗೊಂಡಂತೆ ಮುಂದಿನ 15 ದಿನಗಳವರೆಗೆ ಒಟ್ಟು 12,500 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿತ್ತು.

ಅಂತಿಮವಾಗಿ ಕಾವೇರಿ ನೀರು ನಿಯಂತ್ರಣ ಸಮಿತಿಯ ಶಿಫಾರಸನ್ನು ಎತ್ತಿ ಹಿಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶಿಸಿತ್ತು. ಇದೇ ಆದೇಶವನ್ನು ಸುಪ್ರೀಂ ಕೋರ್ಟ್‌ ಕೂಡಾ ಎತ್ತಿ ಹಿಡಿದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.