ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ.
ಪ್ರಕರಣದಲ್ಲಿ ತಮ್ಮನ್ನು ಬಂಧಿಸಿದ ಜಾರಿ ನಿರ್ದೇಶನಾಲಯದ ಕ್ರಮವನ್ನು ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.
ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿಂತೆ ಅರವಿಂದ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು. ಇ.ಡಿಯ ಈ ಕ್ರಮವನ್ನು ಪ್ರಶ್ನಿಸಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತ ಅವರಿದ್ದ ಪೀಠವು, ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಜೊತೆಗೆ ಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆಯ ಸೆಕ್ಷನ್ 19ರ ಅನ್ವಯ ಬಂಧನದ ಷರತ್ತು ಓದಬೇಕೇ ಎನ್ನುವುದನ್ನು ತೀರ್ಮಾನಿಸಲು ಪ್ರಕರಣವನ್ನು ಹೆಚ್ಚುವರಿ ಪೀಠಕ್ಕೆ ವರ್ಗಾಯಿಸಿದೆ.
ಅಬಕಾರಿ ನೀತಿ ಹಗರಣದಲ್ಲಿ ಇ.ಡಿ ದಾಖಲಿಸಿಕೊಂಡ ಪ್ರಕರಣಲ್ಲಿ ಕೇಜ್ರಿವಾಲ್ ಅವರಿಗೆ ಜಾಮೀನು ಲಭಿಸಿದರೂ, ಜೈಲಿನಿಂದ ಹೊರಬರುವಂತಿಲ್ಲ. ಇದೇ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಅವರನ್ನು ಸಿಬಿಐ ಬಂಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.