ನವದೆಹಲಿ: ‘ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004’ಯು ಅಸಾಂವಿಧಾನಿಕವಾದುದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ’ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ತಡೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಹಾಗೂ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲ, ಮನೋಜ್ ಮಿಶ್ರ ಅವರಿದ್ದ ನ್ಯಾಯಪೀಠವು ವಿಚಾರಣೆ ನಡೆಸಿತು.
ಮದರಸಾ ಶಿಕ್ಷಣ ಮಂಡಳಿ ಕಾಯ್ದೆ ಜಾರಿಗೊಳಿಸುವುದರಿಂದ ಜಾತ್ಯತೀತ ತತ್ವಗಳನ್ನು ಉಲ್ಲಂಘಿಸುತ್ತದೆ ಎಂಬ ಅಲಹಾಬಾದ್ ಹೈಕೋರ್ಟ್‌ನ ತೀರ್ಪು ಸರಿಯಲ್ಲ ಎಂದು ನ್ಯಾಯಪೀಠವು ಹೇಳಿದೆ.
ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ನಿರ್ದಿಷ್ಟ ಶಿಕ್ಷಣವನ್ನು ಆಯ್ಕೆ ಮಾಡುವ ಅಧಿಕಾರ ಇದ್ದೇ ಇರುತ್ತದೆ. ಹಾಗಾಗಿ ಹೈಕೋರ್ಟ್‌ನ ತೀರ್ಪು 17 ಲಕ್ಷ ವಿದ್ಯಾರ್ಥಿಗಳ ಶಿಕ್ಷಣ ಪಡೆಯುವ ಹಕ್ಕುಗಳು ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ಪ್ರತಿಪಾದಿಸಿದೆ.
ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವಲ್ಲಿ ರಾಜ್ಯಗಳು ಕಾನೂನುಬದ್ಧ ಹಿತಾಸಕ್ತಿಗಳನ್ನು ಹೊಂದಿವೆ. ಈ ಉದ್ದೇಶಕ್ಕಾಗಿ ಕಾಯ್ದೆಯನ್ನು ಸಂಪೂರ್ಣ ರದ್ದುಗೊಳಿಸಬೇಕೇ ಎಂಬುದನ್ನು ಪರಿಗಣಿಸುವ ಅಗತ್ಯವಿದೆ ಎಂಬುದನ್ನು ಪರಿಗಣಿಸುವ ಅಗತ್ಯವಿದೆ ಎಂದು ಪೀಠ ಹೇಳಿದೆ.
ಇದೇ ವೇಳೆ ಮಾರ್ಚ್ 22ರಂದು ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಹೈಕೋರ್ಟ್ ಹೇಳಿದ್ದೇನು?
‘ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿ ಕಾಯ್ದೆ 2004’ಯು ಅಸಾಂವಿಧಾನಿಕವಾದುದು. ಇದು, ಜಾತ್ಯತೀತ ತತ್ವಗಳನ್ನು ಉಲ್ಲಂಘಿಸಿದೆ’ ಎಂದು ಅಲಹಾಬಾದ್ ಹೈಕೋರ್ಟ್ ಘೋಷಿಸಿತ್ತು.
ರಾಜ್ಯದಲ್ಲಿ ಪ್ರಸ್ತುತ ಮದರಸಾಗಳಲ್ಲಿರುವ ವಿದ್ಯಾರ್ಥಿಗಳನ್ನು ಸಾಮಾನ್ಯ ವ್ಯವಸ್ಥೆಯ ಶಾಲೆಗಳಿಗೆ ದಾಖಲುಪಡಿಸಬೇಕು ಎಂದೂ ರಾಜ್ಯ ಸರ್ಕಾರಕ್ಕೆ ಕೋರ್ಟ್ ನಿರ್ದೇಶಿಸಿತ್ತು.
ನ್ಯಾಯಮೂರ್ತಿಗಳಾದ ವಿವೇಕ್ ಚೌಧರಿ ಮತ್ತು ಸುಭಾಷ್ ವಿದ್ಯಾರ್ಥಿ ಅವರಿದ್ದ ಪೀಠವು ಈ ಆದೇಶ ನೀಡಿತ್ತು. ಅನ್ಷುಮನ್ ಸಿಂಗ್ ರಾಥೋರ್ ಅವರು ಈ ಕುರಿತು ರಿಟ್ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.