ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಪ್ರಕರಣದಲ್ಲಿ ತಮ್ಮನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಆಪ್ತ ಬಿಭವ್ ಕುಮಾರ್ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದು ಈ ಅರ್ಜಿ ವಿಚಾರಣೆ ಶುಕ್ರವಾರ ನಡೆಯಲಿದೆ.
ಇದನ್ನು ತ್ವರಿತ ವಿಚಾರಣೆಗೆ ಪರಿಗಣಿಸಬೇಕು ಎಂದು ಬಿಭವ್ ಕೋರಿದ್ದರು. ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಹಾಗೂ ನ್ಯಾಯಮೂರ್ತಿ ಮನ್ಮೀತ್ ಪಿ.ಎಸ್ ಅರೋರಾ ಅವರಿದ್ದ ಪೀಠವು, ಮೇ 31ರಂದು ವಿಚಾರಣೆ ನಡೆಸಲು ಸಮ್ಮತಿಸಿತು.
ತಮ್ಮ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಲು ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ. ಅಲ್ಲದೆ ‘ಕಾನೂನುಬಾಹಿರವಾಗಿ ಬಂಧಿಸಿದ್ದಕ್ಕಾಗಿ ‘ಸೂಕ್ತ ಪರಿಹಾರ’ ಕಲ್ಪಿಸಿಕೊಡಬೇಕು. ಬಂಧನದಲ್ಲಿ ಭಾಗಿಯಾದ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದೂ ಅವರು ಹೇಳಿದ್ದಾರೆ.
ಬಿಭವ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸೋಮವಾರ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿತ್ತು.
ಮೇ 13ರಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ನಿವಾಸದಲ್ಲಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ವಾತಿ ಮಾಲಿವಾಲ್ ಆರೋಪಿಸಿದ್ದರು. ಮೇ 18ರಂದು ಬಿಭವ್ ಅವರನ್ನು ಬಂಧಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.