ನವದೆಹಲಿ: ಎಎಪಿಯ ರಾಜ್ಯಸಭಾ ಸಂಸದೆ ಸ್ವಾತಿ ಮಾಲೀವಾಲ್ ಅವರ ಮೇಲಿನ ಹಲ್ಲೆ ಪ್ರಕರಣ ಸಂಬಂಧ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ನ್ಯಾಯಾಂಗ ಬಂಧನದ ಅವಧಿಯು ಜುಲೈ 16ರವರೆಗೆ ವಿಸ್ತರಣೆಯಾಗಿದೆ.
ಮೇ 13ರಂದು ಮುಖ್ಯಮಂತ್ರಿ ಅವರ ಗೃಹ ಕಚೇರಿಯಲ್ಲಿ ಸ್ವಾತಿ ಮಾಲೀವಾಲ್ ಅವರ ಮೇಲೆ ಹಲ್ಲೆ ಮಾಡಿದ ಆರೋಪ ಬಿಭವ್ ಅವರ ಮೇಲಿದೆ.
ಬಿಭವ್ ಅವರನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರ ಮುಂದೆ ಹಾಜರುಪಡಿಸಲಾಯಿತು. ಅವರು ಬಿಭವ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿದ್ದಾರೆ.
ಪ್ರಕರಣದಲ್ಲಿ ಮೇ 18ರಂದು ಬಿಭವ್ ಅವರ ಬಂಧನವಾಗಿತ್ತು. ಅಂದೇ 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿತ್ತು. ಮೇ 24 ರಂದು 4 ದಿನಗಳ ನ್ಯಾಯಂಗ ಬಂಧನಕ್ಕೆ ನೀಡಲಾಗಿತ್ತು. ಬಳಿಕ ಮೂರು ದಿನಗಳು ಮತ್ತೆ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶಿಸಿತ್ತು.
ಮೇ 16ರಂದು ಬಿಭವ್ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳಡಿ ದೂರು ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.