ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಬಿಭವ್ ಕುಮಾರ್ ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಆ. 21ರ ಒಳಗೆ ಪ್ರತಿಕ್ರಿಯೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ದೆಹಲಿ ಪೊಲೀಸರಿಗೆ ನಿರ್ದೇಶಿಸಿತು.
ರಾಜ್ಯಸಭೆ ಸದಸ್ಯೆ, ಎಎಪಿಯ ಸ್ವಾತಿ ಮಲಿವಾಲ್ ಅವರ ಮೇಲೆ ಹಲ್ಲೆ ನಡೆಸಿರುವ ಆರೋಪ ಬಿಭವ್ ಕುಮಾರ್ ಮೇಲಿದೆ. ದೆಹಲಿ ಪೊಲೀಸರನ್ನು ಪ್ರತಿನಿದಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ.ರಾಜು, ಪ್ರತಿಕ್ರಿಯೆ ದಾಖಲಿಸಲು ಒಂದು ವಾರ ಬೇಕು ಎಂದರು.
ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ದೀಪಂಕರ್ ದತ್ತಾ, ಉಜ್ಜಲ್ ಭುಯನ್ ಅವರಿದ್ದ ಪೀಠದ ಎದುರು ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ, ‘ಈ ಪ್ರಕರಣದಲ್ಲಿ ಈಗಾಗಲೇ ಆರೋಪಪಟ್ಟಿ ದಾಖಲಾಗಿದೆ. ಜಾಮೀನು ನೀಡಬಾರದು’ ಎಂದು ಪ್ರತಿಪಾದಿಸಿದರು.
ಜಾಮೀನು ನಿರಾಕರಿಸಿದ್ದ ದೆಹಲಿ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಬಿಭವ್ ಕುಮಾರ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ತನಿಖೆ ಪೂರ್ಣವಾಗಿರುವ ಕಾರಣ ನನ್ನನ್ನು ವಶದಲ್ಲಿಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.