ಚೆನ್ನೈ: ಖ್ಯಾತ ನಟಿ ಗೌತಮಿ ತಡಿಮಲ್ಲ ಅವರು ಬಿಜೆಪಿಯೊಂದಿಗಿನ ತನ್ನ 25 ವರ್ಷಗಳ ಒಡನಾಟವನ್ನು ಕೊನೆಗೊಳಿಸುತ್ತಿರುವುದಾಗಿ ಹೇಳಿದ್ದಾರೆ. ‘ಪಕ್ಷವು ತಮಗೆ ವಂಚಿಸಿದ ವ್ಯಕ್ತಿಗೆ ಬೆಂಬಲ ನೀಡುತ್ತಿದೆ’ ಎಂದು ಅವರು ಆರೋಪಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ಭಾರವಾದ ಮನಸ್ಸು ಮತ್ತು ಭ್ರಮನಿರಸನದಿಂದ ಪಕ್ಷಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ತಮಿಳುನಾಡಿನ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಅವರಿಗೆ ತಿಳಿಸಿರುವುದಾಗಿ’ ಬರೆದುಕೊಂಡಿದ್ದಾರೆ.
2021ರ ವಿಧಾನಸಭೆ ಚುನಾವಣೆಯಲ್ಲಿ ತಮಗೆ ಟಿಕೆಟ್ ನೀಡುವುದಾಗಿ ಪಕ್ಷ ಭರವಸೆ ನೀಡಿತ್ತಾದರೂ ಕೊನೆಯ ಕ್ಷಣದಲ್ಲಿ ಟಿಕೆಟ್ ಕೈತಪ್ಪಿತ್ತು. ಇದರ ಹೊರತಾಗಿಯೂ ನಾನು ಪಕ್ಷಕ್ಕಾಗಿ ದುಡಿದಿದ್ದೇನೆ ಎಂದು ವಿವರಿಸಿದ್ದಾರೆ.
ನನಗೆ ಪಕ್ಷ ಮತ್ತು ನಾಯಕರಿಂದ ಯಾವುದೇ ಬೆಂಬಲ ಸಿಗುತ್ತಿಲ್ಲ. ನಿರ್ದಿಷ್ಟ ವ್ಯಕ್ತಿಯೊಬ್ಬರು ನನಗೆ ಹಣ, ಆಸ್ತಿ ಮತ್ತು ದಾಖಲೆಗಳನ್ನು ವಂಚಿಸಿದ್ದಾರೆ. ನಂಬಿಕೆಗೆ ದ್ರೋಹ ಮಾಡಿದ ಅವರಿಗೆ ಪಕ್ಷದ ನಾಯಕರು ಸಹಾಯ ಮಾಡುತ್ತಿದ್ದು, ಅವರನ್ನು ಬೆಂಬಲಿಸುತ್ತಿರುವುದು ನನಗೆ ತಿಳಿದಿದೆ ಎಂದು ಪತ್ರದಲ್ಲಿ ಬರೆದುಕೊಂಡಿದ್ದಾರೆ.
ವಂಚನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದೇನೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಮತ್ತು ನ್ಯಾಯಾಂಗ ವ್ಯವಸ್ಥೆಯಲ್ಲಿ ತನಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಹೇಳಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.