ಚೆನ್ನೈ: ಮೇಕೆದಾಟು ಅಣೆಕಟ್ಟು ವಿಚಾರ ಕುರಿತು ಚರ್ಚಿಸಲು ಜುಲೈ 12 ರಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಸರ್ವಪಕ್ಷಗಳ ಸಮಾಲೋಚನಾ ಸಭೆ ಕರೆದಿದ್ದಾರೆ.
ರೈತರ ಹಿತಾಸಕ್ತಿ ರಕ್ಷಣೆಯ ಹಿನ್ನೆಲೆಯಲ್ಲಿ ತಮಿಳುನಾಡಿನ ಎಲ್ಲ ಪಕ್ಷಗಳ ಅಭಿಪ್ರಾಯಗಳನ್ನು ಪಡೆಯುವ ಉದ್ದೇಶದಿಂದ ಈ ಸಭೆ ಕರೆಯಲಾಗಿದೆ ಎಂದು ಶುಕ್ರವಾರ ರಾಜ್ಯ ಸರ್ಕಾರ ತಿಳಿಸಿದೆ. ಈ ವಿಷಯದ ಬಗ್ಗೆ ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸ್ಟಾಲಿನ್ ಅವರು ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ‘ಮೇಕೆದಾಟು ಅಣೆಕಟ್ಟು ನಿರ್ಮಾಣ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿದೆ. ಇದರಿಂದ ತಮಿಳುನಾಡಿನ ಕೃಷಿಕರಿಗೆ ತುಂಬಾ ತೊಂದರೆಯಾಗುತ್ತದೆ. ಆದ್ದರಿಂದ ಮೇಕೆದಾಟುವಿನಲ್ಲಿ ಅಣೆಕಟ್ಟು ನಿರ್ಮಿಸಲು ತಮಿಳುನಾಡು ಸರ್ಕಾರ ಕರ್ನಾಟಕಕ್ಕೆ ಅವಕಾಶ ನೀಡುವುದಿಲ್ಲ ಎಂದು ತಿಳಿಸಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
ಇತ್ತೀಚೆಗೆ ‘ಮೇಕೆದಾಟು ಅಣೆಕಟ್ಟು ನಿರ್ಮಾಣವನ್ನು ತಮಿಳುನಾಡು ಸರ್ಕಾರ ವಿರೋಧಿಸಬಾರದು‘ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪತ್ರ ಬರೆದು ಒತ್ತಾಯಿಸಿದ ಹಿನ್ನೆಲೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು, ಈ ರೀತಿ ಪತ್ರದ ಮೂಲಕವೇ ಪ್ರತಿಕ್ರಿಯೆ ನೀಡಿದ್ದಾರೆ.
ಇತ್ತೀಚೆಗೆ ಇದೇ ಮೇಕೆದಾಟು ಅಣೆಕಟ್ಟು ವಿಚಾರಕ್ಕೆ ಸಂಬಂಧಿಸಿದಂತೆ ಎಂ.ಕೆ.ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಹಾಗೂ ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದುರೈಮುರುಗನ್ ಅವರು ಕೇಂದ್ರದ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.