ಚೆನ್ನೈ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನಾಕಾರರ ವಿರುದ್ಧ ಕಳೆದ ವರ್ಷ ಆರಂಭದಲ್ಲಿ ದಾಖಲಿಸಲಾಗಿದ್ದ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು. ಲಾಕ್‌ಡೌನ್ ನಿಯಮ ಉಲ್ಲಂಘನೆಗೆ ಸಂಬಂಧಿಸಿ ದಾಖಲಾಗಿರುವ ಸುಮಾರು 10 ಲಕ್ಷ ಪ್ರಕರಣಗಳನ್ನೂ ಹಿಂಪಡೆಯಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಘೋಷಿಸಿದ್ದಾರೆ.
ಮುಂಬರುವ ಚುನಾವಣೆಗೆ ಸಂಬಂಧಿಸಿ ಕಡಯನಲ್ಲೂರ್‌ನಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಹಿಂಸಾಚಾರ, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ 2ನೇ ಲಾಕ್‌ಡೌನ್ ವೇಳೆ ಪಾಸ್ ದುರ್ಬಳಕೆ ಪ್ರಕರಣಗಳನ್ನು ಬಿಟ್ಟು ಉಳಿದವುಗಳನ್ನೆಲ್ಲ ವಾಪಸ್ ಪಡೆಯಲಾಗುವುದು. ಜನರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಕ್ಕೆ ಬರಲಾಗಿದೆ’ ಎಂದು ತಿಳಿಸಿದ್ದಾರೆ.
ಸಿಎಎ ವಿರೋಧಿ ಪ್ರತಿಭಟನೆ ವೇಳೆ ನಿಷೇಧಾಜ್ಞೆ ಉಲ್ಲಂಘಿಸಿ ಮೆರವಣಿಗೆಗಳನ್ನು ನಡೆಸಿದ್ದು, ಸಾರ್ವಜನಿಕ ಆಸ್ತಿ–ಪಾಸ್ತಿಗೆ ಹಾನಿ ಉಂಟುಮಾಡಿದ್ದು ಹಾಗೂ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಸುಮಾರು 1,500 ಪ್ರಕರಣಗಳನ್ನು ದಾಖಲಿಸಲಾಗಿತ್ತು ಎಂದೂ ಅವರು ಹೇಳಿದ್ದಾರೆ.
ಕೂಡಂಕುಳಂ ಪರಮಾಣು ವಿದ್ಯುತ್ ಯೋಜನೆ ವಿರುದ್ಧ ಪ್ರತಿಭಟನೆಯಲ್ಲಿ ಭಾಗವಹಿಸಿದವರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಕೋರಿ ಸಲ್ಲಿಕೆಯಾದ ಮನವಿಯನ್ನು ಉಲ್ಲೇಖಿಸಿದ ಅವರು, ಹಲವು ಪ್ರಕರಣಗಳನ್ನು ಈಗಾಗಲೇ ರದ್ದುಪಡಿಸಲಾಗಿದೆ ಎಂದು ಹೇಳಿದ್ದಾರೆ.
ಕೆಲವು ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ. ಇನ್ನು ಕೆಲವು ಎಫ್‌ಐಆರ್ ಹಂತದಲ್ಲಿವೆ. ಪ್ರಕರಣಗಳನ್ನು ಕೈಬಿಡುವಂತೆ ಜನರು ಮಾಡಿರುವ ಮನವಿಯನ್ನು ಕಾನೂನಿಗೆ ಅನುಗುಣವಾಗಿ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.