ನವದೆಹಲಿ: ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ತಮ್ಮ ಪತ್ನಿ ದುರ್ಗಾವತಿ ಸ್ಟಾಲಿನ್ ಅವರೊಂದಿಗೆ ಶುಕ್ರವಾರ ಬೆಳಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ.
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಸ್ಟಾಲಿನ್ ಅವರು ಮೊದಲ ಬಾರಿಗೆ ಮಿತ್ರಪಕ್ಷ ಕಾಂಗ್ರೆಸ್‌ನ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡಿದ್ದ ಡಿಎಂಕೆ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ.
ನೂತನ ಸರ್ಕಾರದ ಯೋಜನೆಗಳು ಮತ್ತು ಪಾಲಿಸಿಗಳ ಬಗ್ಗೆ ಉಭಯ ಪಕ್ಷಗಳ ನಾಯಕರು ಚರ್ಚೆ ನಡೆಸಿದರು ಎನ್ನಲಾಗಿದೆ.
"ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ನಾನು ತಮಿಳುನಾಡಿನ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಅವರ ಪತ್ನಿ ದುರ್ಗಾವತಿ ಸ್ಟಾಲಿನ್ ಅವರನ್ನು ಇಂದು ಬೆಳಗ್ಗೆ ಹೃತ್ಪೂರ್ವಕವಾಗಿ ಬರಮಾಡಿಕೊಂಡೆವು'' ಎಂದು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ತಮಿಳುನಾಡಿನ ಜನತೆಗಾಗಿ ಡಿಎಂಕೆ ಜೊತೆಗೆ ಅತ್ಯಂತ ಬಾಂಧವ್ಯದಿಂದ ಅಭಿವೃದ್ಧಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದಾಗಿ ಭರವಸೆ ನೀಡಿದರು.
ಸ್ಟಾಲಿನ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.