ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ಪೆರಿಯನಸಲೂರು ಗ್ರಾಮದ ಮೃತ ವಿದ್ಯಾರ್ಥಿನಿಯ ಮನೆಯ ಹೊರಗೆ ಪೊಲೀಸರು ನೋಟಿಸ್ ಅಂಟಿಸಿದ್ದಾರೆ.
ವಿದ್ಯಾರ್ಥಿನಿ ಮೃತದೇಹದ ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ಶವ ಪಡೆದು ಅಂತಿಮ ವಿಧಿವಿಧಾನಗಳನ್ನು ನೆರವೇರಿಸುವಂತೆ ಕುಟುಂಬಸ್ಥರಿಗೆ ಸೂಚಿಸಲಾಗಿದೆ.
ಕಲ್ಲಕುರಿಚಿಯ ಚಿನ್ನಸೇಲಂನಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿ ಜುಲೈ 13ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಳು. ಆಕೆಯ ಸಾವಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಒಂದು ವಾರದಿಂದ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡಿತ್ತು.
ವಿದ್ಯಾರ್ಥಿನಿ ಸಾವು ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ. ಅಲ್ಲದೆ, ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಮತ್ತು ಜುಲೈ 17 ರಂದು ಶಾಲೆಯನ್ನು ಧ್ವಂಸಗೊಳಿಸಿದ್ದಕ್ಕಾಗಿ ಸುಮಾರು 300 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣದಲ್ಲಿ ಮರು ಮರಣೋತ್ತರ ಪರೀಕ್ಷೆ ನಡೆಸುವ ವೈದ್ಯರ ತಂಡಕ್ಕೆ ತನ್ನ ಆಯ್ಕೆಯ ವೈದ್ಯರನ್ನು ಸೇರಿಸುವಂತೆ ಆಕೆಯ ತಂದೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಕಲ್ಲಕುರಿಚಿ ಹಿಂಸಾಚಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ತಮಿಳುನಾಡಿನ ಡಿಜಿಪಿ ಸಿ. ಶೈಲೇಂದ್ರ ಬಾಬು ಮಂಗಳವಾರ ತಿಳಿಸಿದ್ದಾರೆ.
ಇವನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.