ಮೋತಿಹಾರಿ: ಬಿಹಾರದಲ್ಲಿ ಮತ್ತೊಂದು ಸೇತುವೆ ಕುಸಿದಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ನಾಯಕ ತೇಜಸ್ವಿ ಯಾದವ್ ಭಾನುವಾರ ಹೇಳಿದ್ದಾರೆ. ಆದರೆ, ಈ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿಗಳು, ಸೇತುವೆ ಕುಸಿದಿಲ್ಲ. ಬದಲಾಗಿ ಭಾರಿ ಮಳೆಯಿಂದಾಗಿ ತಾತ್ಕಾಲಿಕವಾಗಿ ನಿರ್ಮಿಸಿದ್ದ ಗೋಡೆ ಕೊಚ್ಚಿಹೋಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಸೇತುವೆ ಕುಸಿತದ ವಿಡಿಯೊವನ್ನು ‘ಎಕ್ಸ್’ನಲ್ಲಿ ಹಂಚಿಕೊಂಡಿರುವ ಯಾದವ್, ‘ಕಳೆದ 19 ದಿನಗಳಲ್ಲಿ ಕುಸಿದಿರುವ 13ನೇ ಭ್ರಷ್ಟ ಸೇತುವೆ ಇದಾಗಿದೆ. ಮೋರಿಗಳು, ರಸ್ತೆಗಳು ಕುಸಿದಿರುವ ಲೆಕ್ಕವಿಲ್ಲದಷ್ಟು ಪ್ರಕರಣಗಳನ್ನು ನೋಡಬಹುದು’ ಎಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರದ ಸರ್ಕಾರದ ವಿರುದ್ಧ ಗುಡುಗಿದ್ದಾರೆ
ಮಧುಬನ್ ಬ್ಲಾಕ್‌ಗೆ ಒಳಪಡುವ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ನಕಲಿ ವಸ್ತುಗಳನ್ನು ಬಳಸಿ ನಡೆಸಿರುವ ಕಳಪೆ ಕಾಮಗಾರಿ ಇದಾಗಿದೆ ಎಂದು ಸ್ಥಳೀಯರು ಮಾತನಾಡಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.
ಘಟನೆ ಸಂಬಂಧ ಸ್ಥಳ ಪರಿಶೀಲನೆ ನಡೆಸಿ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ. ಕಳೆದ ಎರಡು ವಾರಗಳಲ್ಲಿ ಬಿಹಾರ ಜಿಲ್ಲೆಗಳಲ್ಲಿ ಹತ್ತಕ್ಕೂ ಹೆಚ್ಚು ಸೇತುವೆಗಳು ಕುಸಿದಿದ್ದು, 15 ಎಂಜಿನಿಯರ್‌ಗಳನ್ನು ಅಮಾನತುಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.