ಪಣಜಿ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ನೀಡಿರುವ ತೀರ್ಪಿನಲ್ಲಿ ಸಂತ್ರಸ್ತೆಯ ಗುರುತು ಸಿಗುವ ಮಾಹಿತಿಯನ್ನು ತೆಗೆದುಹಾಕುವಂತೆ ಬಾಂಬೆ ಹೈಕೋರ್ಟ್‌ನ ಗೋವಾ ಪೀಠವು ಸೆಷನ್ಸ್ ನ್ಯಾಯಾಲಯಕ್ಕೆ ಸೂಚನೆ ನೀಡಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪತ್ರಕರ್ತ ತರುಣ್ ತೇಜ್‌ಪಾಲ್ ಅವರನ್ನು ಇತ್ತೀಚೆಗೆ ಸೆಷನ್ಸ್ ನ್ಯಾಯಾಲಯ ದೋಷಮುಕ್ತಗೊಳಿಸಿತ್ತು. ಈ ಪ್ರಕರಣದ ತೀರ್ಪನ್ನು ನ್ಯಾಯಾಲಯದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡುವ ಮುನ್ನ ಸಂತ್ರಸ್ತೆಯ ಗುರುತು ಲಭ್ಯವಾಗುವ ಮಾಹಿತಿಯನ್ನು ತೆಗೆದುಹಾಕಬೇಕು ಎಂದು ಪೀಠವು ನಿರ್ದೇಶನ ನೀಡಿದೆ.
ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿದ ಗೋವಾ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಸಂದರ್ಭದಲ್ಲಿ ನ್ಯಾಯಮೂರ್ತಿ ಎಸ್.ಸಿ. ಗುಪ್ತೆ ಅವರು ಈ ಸೂಚನೆ ನೀಡಿದ್ದಾರೆ.
2013ರಲ್ಲಿ ಗೋವಾದ ಪಂಚತಾರಾ ಹೋಟೆಲ್‌ನಲ್ಲಿ ತನ್ನ ಕಿರಿಯ ಸಹೋದ್ಯೋಗಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಬಗ್ಗೆ ತೆಹಲ್ಕಾ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್‌ಪಾಲ್ ಅವರ ವಿರುದ್ಧ ಆರೋಪಪಟ್ಟಿ ದಾಖಲಿಸಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ್ದ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಕ್ಷಮಾ ಜೋಷಿ ಅವರು ತೇಜ್‌ಪಾಲ್ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದರು.
ಈ ಪ್ರಕರಣದಲ್ಲಿ ಸಂತ್ರಸ್ತೆಯ ನಡವಳಿಕೆಯನ್ನು ನ್ಯಾಯಾಧೀಶರು ಪ್ರಶ್ನಿಸಿದ್ದರು. ಸಂತ್ರಸ್ತೆಯು ಯಾವುದೇ ರೀತಿಯಲ್ಲಿ ಆಘಾತಕ್ಕೆ ಒಳಗಾದ ನಡವಳಿಕೆಯನ್ನು ಪ್ರದರ್ಶಿಸಿಲ್ಲ ಎಂದು ಹೇಳಿದ್ದರು.
ಗುರುವಾರ ವಿಚಾರಣೆ ಸಂದರ್ಭದಲ್ಲಿ ಈ ವಿಷಯ ಪ್ರಸ್ತಾಪಿಸಿದ ಗೋವಾ ಸರ್ಕಾರದ ಪರ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ‘ಸಂತ್ರಸ್ತೆ ಕುರಿತು ತೀರ್ಪಿನಲ್ಲಿ ಉಲ್ಲೇಖಿಸಿದ ಅಭಿಪ್ರಾಯಗಳು ನಿಜಕ್ಕೂ ಆಶ್ಚರ್ಯ ಮೂಡಿಸಿದೆ‘ ಎಂದು ಹೇಳಿದರು.
‘ತೀರ್ಪು ಈಗಾಗಲೇ ಬಹಿರಂಗವಾಗಿದೆ. ನ್ಯಾಯಾಲಯದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕಾಗಿದೆ. ಆದರೆ, ತೀರ್ಪಿನ ಹಲವು ಪ್ಯಾರಾಗಳಲ್ಲಿ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಲಾಗಿದೆ. ಇದು ಕ್ರಿಮಿನಲ್ ಅಪರಾಧ’ ಎಂದು ಹೇಳಿದರು.
‘ತೀರ್ಪಿನಲ್ಲಿ ಸಂತ್ರಸ್ತೆಯ ತಾಯಿ ಮತ್ತು ಪತಿಯ ಹೆಸರು ಬಹಿರಂಗಪಡಿಸಲಾಗಿದೆ. ಜತೆಗೆ ಇ–ಮೇಲ್ ವಿಳಾಸವೂ ಇದೆ’ ಎಂದು ಹೇಳಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ಎಸ್.ಸಿ. ಗುಪ್ತೆ ಅವರು, ‘ಇಂತಹ ಪ್ರಕರಣಗಳಲ್ಲಿ ಸಂತ್ರಸ್ತೆಯ ಗುರುತು ಬಹಿರಂಗಪಡಿಸುವುದು ಅಪರಾಧವಾಗುತ್ತದೆ ಎಂದು ಕಾನೂನು ಹೇಳುತ್ತದೆ. ಹೀಗಾಗಿ, ನ್ಯಾಯದ ದೃಷ್ಟಿಯಿಂದ ಸಂತ್ರಸ್ತೆಯ ಗುರುತು ಸಿಗುವ ಮಾಹಿತಿಯನ್ನು ತೆಗೆದುಹಾಕುವಂತೆ ಸೆಷನ್ಸ್ ನ್ಯಾಯಾಲಯಕ್ಕೆ ಸೂಚಿಸಲಾಗುವುದು’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.