ಹೈದರಾಬಾದ್: ಆರು ಗ್ಯಾರಂಟಿಗಳು ಹಾಗೂ ಹಲವು ಘೋಷಣೆಗಳು ಇರುವ ತೆಲಂಗಾಣ ವಿಧಾನಸಭಾ ಚುನಾವಣಾ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶುಕ್ರವಾರ ಬಿಡುಗಡೆ ಮಾಡಿದರು.
ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಗೆ ‘ಅಭಯ ಹಸ್ತಂ’ ಎಂಬ ಹೆಸರು ನೀಡಿದೆ. ಏನೇ ಬಂದರೂ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎಂಬ ಭಾವನೆ ಮತದಾರರಲ್ಲಿ ಇದೆ ಎಂದು ಖರ್ಗೆ ಹೇಳಿದರು.
‘ಗ್ಯಾರಂಟಿಗಳನ್ನು ನಾವು ಕರ್ನಾಟಕದಲ್ಲಿ ನೀಡಿದ್ದೇವೆ, ಅವುಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿರುವ ಕಾರಣ ಕರ್ನಾಟಕದ ಮಹಿಳೆಯರು ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ತೆಲಂಗಾಣದಲ್ಲಿ ಆರೂ ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಲಾಗುತ್ತದೆ’ ಎಂದು ಖರ್ಗೆ ಹೇಳಿದರು.
‘ಪ್ರಣಾಳಿಕೆಯು ನಮ್ಮ ಪಾಲಿಗೆ ಭಗವದ್ಗೀತೆ, ಕುರಾನ್, ಬೈಬಲ್ ಇದ್ದಂತೆ. ಆರೂ ಗ್ಯಾರಂಟಿಗಳಿಗೆ ಮೊದಲ ಸಂಪುಟ ಸಭೆಯಲ್ಲಿಯೇ ಅನುಮೋದನೆ ನೀಡಲಾಗುತ್ತದೆ’ ಎಂದರು.
‘ಮೋದಿ ಮತ್ತು ಕೆಸಿಆರ್ ಒಟ್ಟಾಗಿ ಏನೇ ಪ್ರಯತ್ನ ನಡೆಸಿದರೂ ನಾವು ಅಧಿಕಾರಕ್ಕೆ ಬರುವುದು ಖಚಿತ’ ಎಂದು ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರಿಗೆ ಸವಾಲೆಸೆದರು.
ಮುಖ್ಯಮಂತ್ರಿ ರಾವ್ ಅವರು ತಾವು ನಿವೃತ್ತರಾಗಲು ಸಿದ್ಧರಿರುವುದಾಗಿ ಹೇಳುತ್ತಾರೆ, ಜನ ಕೂಡ ಅವರನ್ನು ಬೀಳ್ಕೊಡಲು ಸಿದ್ಧರಾಗಿದ್ದಾರೆ ಎಂದು ಲೇವಡಿ ಮಾಡಿದರು.
ಕಾಲೇಶ್ವರಂ ಏತ ನೀರಾವರಿ ಯೋಜನೆಯ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.