ಬೆಂಗಳೂರು: ಸುಪ್ರೀಂ ಕೋರ್ಟ್‌ನ ಮುಂದಿನ ಸಿಜೆಐ ಆಗಿ ನ್ಯಾಯಮೂರ್ತಿ ಸಂಜಯ್ ಖನ್ನಾ ಅವರನ್ನು ನೇಮಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
‘ಭಾರತದ ಸಂವಿಧಾನದಲ್ಲಿ ನೀಡಲಾಗಿರುವ ಅಧಿಕಾರದಂತೆ, ಭಾರತದ ಮುಖ್ಯನ್ಯಾಯಮೂರ್ತಿಯವರೊಂದಿಗೆ ಸಮಾಲೋಚನೆ ನಡೆಸಿ, ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನವೆಂಬರ್ 11, 2024ರಿಂದ ಜಾರಿಗೆ ಬರುವಂತೆ ಮುಖ್ಯ ನ್ಯಾಯಮೂರ್ತಿಯನ್ನಾಗಿ ರಾಷ್ಟಪತಿ ನೇಮಕ ಮಾಡಿದ್ದಾರೆ’ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘಾವಲ್ ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
ಸಂಜೀವ್ ಖನ್ನಾ ಅವರು ನವೆಂಬರ್ 11ರಂದು ದೇಶದ 51ನೇ ಮುಖ್ಯನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಅವರ ಅಧಿಕಾರವಧಿ 2025ರ ಮೇ 13ರವರೆಗೆ ಇರಲಿದೆ.
ಹಾಲಿ ಸಿಜೆಐ ಡಿ.ವೈ. ಚಂದ್ರಚೂಡ್ ಅವರು ನವೆಂಬರ್ 10ರಂದು ನಿವೃತ್ತರಾಗಲಿದ್ದಾರೆ. ನ್ಯಾ. ಖನ್ನಾ ಅವರನ್ನು ತನ್ನ ಉತ್ತರಾಧಿಕಾರಿಯಾಗಿ ನೇಮಕಮಾಡಬೇಕು ಎಂದು ನ್ಯಾ. ಚಂದ್ರಚೂಡ್ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದರು.
1960ರ ಮೇ 14ರಂದು ಜನಿಸಿರುವ ಸಂಜೀವ್ ಖನ್ನಾ ಅವರು ದೆಹಲಿ ವಿಶ್ವವಿದ್ಯಾಲಯದಿಂದ ಕಾನೂನು ಪದವಿ ಪಡೆದಿದ್ದಾರೆ. 2005ರಲ್ಲಿ ಅವರು ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ಪದೋನ್ನತಿ ಹೊಂದಿದ್ದರು. ನಂತರ, 2006ರಲ್ಲಿ ಹೈಕೋರ್ಟ್‌ನ ಕಾಯಂ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2019ರ ಜನವರಿ 18ರಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಬಡ್ತಿ ಪಡೆದರು.
ಸಂಜೀವ್ ಖನ್ನಾ ಅವರು, ದೇಶದ ಗಮನ ಸೆಳೆದ 1973ರ ಐತಿಹಾಸಿಕ ಕೇಶವಾನಂದ ಭಾರತಿ ತೀರ್ಪು ನೀಡಿದ್ದ ನ್ಯಾಯಮೂರ್ತಿ ಎಚ್.ಆರ್ ಖನ್ನಾ ಅವರ ಸೋದರಳಿಯ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.