ADVERTISEMENT

ತಿರುಪತಿ ಲಡ್ಡು ತಯಾರಿಕೆಗೆ ಪ್ರಾಣಿಗಳ ಕೊಬ್ಬು ಬಳಕೆ ಆರೋಪ: ತನಿಖೆಗೆ ಜೋಶಿ ಆಗ್ರಹ

ಪಿಟಿಐ
Published 20 ಸೆಪ್ಟೆಂಬರ್ 2024, 9:10 IST
Last Updated 20 ಸೆಪ್ಟೆಂಬರ್ 2024, 9:10 IST
ಪ್ರಲ್ಹಾದ ಜೋಶಿ
ಪ್ರಲ್ಹಾದ ಜೋಶಿ   

ನವದೆಹಲಿ: ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರವು ವಿಶ್ವವಿಖ್ಯಾತ ತಿರುಪತಿ ಲಡ್ಡು ತಯಾರಿಸಲು ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಾಡಿರುವ ಆರೋಪದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಚಂದ್ರಬಾಬು ನಾಯ್ಡು ಅವರು ಮಾಡಿರುವ ಆರೋಪ ಕಳವಳಕಾರಿ ವಿಷಯವಾಗಿದೆ. ಈ ಕುರಿತು ಸಮಗ್ರ ತನಿಖೆಯ ಅಗತ್ಯವಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು' ಎಂದು ಹೇಳಿದ್ದಾರೆ.

ಪ್ರಕರಣ ಕುರಿತು ಸೂಕ್ತ ತನಿಖೆ ನಡೆಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಭರವಸೆ ನೀಡಿದ್ದಾರೆ.

ADVERTISEMENT

‘ತಿರುಮಲ ದೇವಸ್ಥಾನದ ಪ್ರಸಾದ ‘ಲಡ್ಡು‘ ತಯಾರಿಸಲು, ಈ ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗುತ್ತಿತ್ತು’ ಎಂಬ ನಾಯ್ಡು ಹೇಳಿಕೆಗೆ, ಪ್ರತಿಪಕ್ಷಗಳು ತೀವ್ರ ಆಕ್ಷೇಪ ಮತ್ತು ವಿರೋಧ ವ್ಯಕ್ತಪಡಿಸಿವೆ.

ಮುಖ್ಯಮಂತ್ರಿಯವರ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಅದರ ಸಮರ್ಥನೆಯಾಗಿ ಗುಜರಾತ್‌ನ ಜಾನುವಾರು ಪ್ರಯೋಗಾಲಯ ಎನ್‌ಡಿಡಿಬಿ ಕಾಫ್‌ ಲಿಮಿಟೆಡ್‌ನ ವರದಿಯನ್ನು ಟಿಡಿಪಿ ಬಿಡುಗಡೆ ಮಾಡಿತ್ತು.

ಲಡ್ಡುವನ್ನು ತಯಾರಿಸಲು ಬಳಸಿದ್ದ ತುಪ್ಪದ ಮಾದರಿಯಲ್ಲಿ ಗೋಮಾಂಸದ ಚರ್ಬಿಯ ಅಂಶವು ಪತ್ತೆಯಾಗಿದೆ ಎಂದು ದೃಢಪಡಿಸಿದ ಪ್ರಯೋಗಾಲಯ ವರದಿಯನ್ನು ಟಿಡಿಪಿ ವಕ್ತಾರ ಆನಂ ವೆಂಕಟರಮಣ ರೆಡ್ಡಿ ಬಿಡುಗಡೆ ಮಾಡಿದ್ದರು.

ಈ ವರದಿಯ ಪ್ರಕಾರ, ತುಪ್ಪದ ಮಾದರಿಯಲ್ಲಿ ಮೀನಿನ ಎಣ್ಣೆ, ಗೋಮಾಂಸದ ಚರ್ಬಿ, ಹಂದಿಯ ಕೊಬ್ಬಿನ ಅಂಶಗಳು ಇರುವುದು ಪತ್ತೆಯಾಗಿದೆ. 2024ರ ಜುಲೈ 9ರಂದು ತುಪ್ಪದ ಮಾದರಿಯನ್ನು ಪಡೆಯಲಾಗಿತ್ತು. ಪ್ರಯೋಗಾಲಯದ ವರದಿಯು ಜುಲೈ 16ರಂದು ಬಂದಿದೆ.

ಆದರೆ, ಆಂಧ್ರಪ್ರದೇಶ ಸರ್ಕಾರ ಅಥವಾ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಅಧಿಕೃತವಾಗಿ ಈ ವರದಿಯನ್ನು ದೃಢಪಡಿಸಿಲ್ಲ. ಗುಜರಾತ್‌ನಲ್ಲಿರುವ ಕೇಂದ್ರ ಸರ್ಕಾರದ ರಾಷ್ಟ್ರೀಯ ಹೈನುಗಾರಿಕೆ ಅಭಿವೃದ್ಧಿ ಮಂಡಳಿಯಲ್ಲಿ ಈ ಪ್ರಯೋಗಾಲಯವಿದೆ.

ಬುಧವಾರ ಎನ್‌ಡಿಎ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಕುರಿತು ಮಾತನಾಡಿದ್ದ ಮುಖ್ಯಮಂತ್ರಿ, ‘ನಮ್ಮ ಸರ್ಕಾರ ಬಂದ ಮೇಲೆ ಶುದ್ಧ ತುಪ್ಪವನ್ನೇ ಬಳಸಲಾಗುತ್ತಿದೆ. ಪ್ರಸಾದದ ಗುಣಮಟ್ಟ ವೃದ್ಧಿಸಲು ತಯಾರಿಕೆಯ ಸ್ಥಳವನ್ನು ಶುದ್ದೀಕರಿಸಲಾಗಿದೆ’ ಎಂದೂ ಹೇಳಿದ್ದರು.

ತಿರುಪತಿ ಲಡ್ಡು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.