ADVERTISEMENT

LS Election: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ವಿರುದ್ಧ ಟಿಎಂಸಿ ನೇರ ಹಣಾಹಣಿ: ಮಮತಾ

ಪಿಟಿಐ
Published 28 ಡಿಸೆಂಬರ್ 2023, 10:14 IST
Last Updated 28 ಡಿಸೆಂಬರ್ 2023, 10:14 IST
<div class="paragraphs"><p>ಮಮತಾ ಬ್ಯಾನರ್ಜಿ </p></div>

ಮಮತಾ ಬ್ಯಾನರ್ಜಿ

   

ಕೋಲ್ಕತ್ತ: ‘ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯೊಂದಿಗೆ ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಕೈಜೋಡಿಸಿದ್ದು, ಬರಲಿರುವ ಲೋಕಸಭಾ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಕೇಸರಿ ಪಕ್ಷದ ವಿರುದ್ಧ ಸೆಣಸಲಿದೆ’ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಉತ್ತರ 24 ಪರಗಣ ಜಿಲ್ಲೆಯ ದೇಗಂಗಾದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಗುರುವಾರ ಮಾತನಾಡಿದ ಅವರು, ‘ಒಂದೆಡೆ ವಿರೋಧ ಪಕ್ಷಗಳನ್ನು ಕಳ್ಳರು ಎಂಬಂತೆ ಬಿಜೆಪಿ ಬಿಂಬಿಸುತ್ತಿದೆ. ಮತ್ತೊಂದೆಡೆ ದೇಶದಲ್ಲಿನ ಪ್ರಜಾಪ್ರಭುತ್ವವನ್ನು ಕೇಂದ್ರೀಕೃತಗೊಳಿಸುವ ಪ್ರಯತ್ನ ನಡೆಯುತ್ತಿದೆ’ ಎಂದರು.

ADVERTISEMENT

‘ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ), ಬಿಜೆಪಿ ಮತ್ತು ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿದ್ದು, ಟಿಎಂಸಿ ವಿರುದ್ಧ ಸಕ್ರಿಯವಾಗಿ ಪ್ರಚಾರ ಮಾಡುತ್ತಿವೆ. ರಾಷ್ಟ್ರಮಟ್ಟದಲ್ಲಿ ಇಂಡಿಯಾ ಒಕ್ಕೂಟವು ಕೇಸರಿ ಪಡೆ ವಿರುದ್ಧ ಹೋರಾಡುತ್ತಿದ್ದರೆ, ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಬಿಜೆಪಿಯನ್ನು ಎದುರಿಸುತ್ತಿದೆ’ ಎಂದರು.

‘ಬಾಂಗ್ಲಾದೇಶದೊಂದಿಗೆ ಗಡಿ ಹಂಚಿಕೊಂಡಿರುವ ರಾಜ್ಯದ ಭಾಗಗಳಲ್ಲಿ ವಲಸಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಬಿಜೆಪಿಯು ಪೌರತ್ವ ನೀಡುವ ಪ್ರಕ್ರಿಯೆಯನ್ನೇ ತನ್ನ ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ’ ಎಂದು ಮಮತಾ ಆರೋಪಿಸಿದ್ದಾರೆ.

‘ಪೌರತ್ವ ವಿಷಯದಲ್ಲಿ ಬಿಜೆಪಿಯು ಜನರ ದಿಕ್ಕು ತಪ್ಪಿಸುತ್ತಿದೆ. ಈ ಮೊದಲು ಜಿಲ್ಲಾ ನ್ಯಾಯಾಧೀಶರೇ ಪೌರತ್ವ ವಿಷಯವನ್ನು ನಿರ್ಧರಿಸುತ್ತಿದರು. ಆದರೆ ಈಗ ಅವರಿಂದ ಆ ಅಧಿಕಾರವನ್ನೂ ಕಸಿದುಕೊಳ್ಳಲಾಗಿದೆ. ಜನರ ಬಳಿ ಪೌರತ್ವವೇ ಇಲ್ಲವಾದಲ್ಲಿ ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಅವರು ಪಡೆಯುವುದಾದರೂ ಹೇಗೆ?’ ಎಂದು ಪ್ರಶ್ನಿಸಿದ್ದಾರೆ.‌

ಮಮತಾ ಬ್ಯಾನರ್ಜಿ ವಿರುದ್ಧ ಹರಿಹಾಯ್ದಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ‘ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಜಾರಿಗೆ ತರುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಇದು ಈ ನೆಲದ ಕಾನೂನು. ಆದರೆ ಮಮತಾ ಅವರು ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.