ಚೆನ್ನೈ: ರಾಜ್ಯದ ವಿದ್ಯಾರ್ಥಿಗಳಿಗೆ ನೀಟ್ (ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ)ನಿಂದ ವಿನಾಯ್ತಿ ನೀಡುವ ಮಸೂದೆಗೆ ತಮಿಳುನಾಡು ವಿಧಾನಸಭೆ ಮತ್ತೆ ಅಂಗೀಕಾರ ನೀಡಿದ ಸುಮಾರು 3 ತಿಂಗಳ ಬಳಿಕ, ರಾಷ್ಟ್ರಪತಿಯವರ ಅಂಕಿತಕ್ಕಾಗಿ ಈ ಮಸೂದೆಯನ್ನು ರಾಜ್ಯಪಾಲ ಆರ್.ಎನ್. ರವಿ ಅವರು ಕೇಂದ್ರ ಗೃಹ ಸಚಿವಾಲಯಕ್ಕೆ ರವಾನಿಸಿದ್ದಾರೆ.
ಈ ಬಗ್ಗೆ ಬುಧವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು, 'ಎನ್ಇಟಿ ಪರೀಕ್ಷೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ವಿನಾಯ್ತಿ ನೀಡುವ ಮಸೂದೆಯನ್ನು ರಾಜ್ಯಪಾಲರು ರಾಷ್ಟ್ರಪತಿಗಳಿಗೆ ರವಾನಿಸಿದ್ದಾರೆ. ಇದೊಂದು ಐತಿಹಾಸಿಕ ಬೆಳವಣಿಗೆ.ಈ ವಿಚಾರವನ್ನು ರಾಜ್ಯಪಾಲರ ಕಾರ್ಯದರ್ಶಿ ನನಗೆ ತಿಳಿಸಿದ್ದಾರೆ. ಈ ಸಂತೋಷದ ಸುದ್ದಿಯನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ಹರ್ಷಿತನಾಗಿದ್ದೇನೆ' ಎಂದು ಹೇಳಿದ್ದಾರೆ.
ಆದರೆ, ನೀಟ್‌ನಿಂದ ರಾಜ್ಯಗಳಿಗೆ ವಿನಾಯ್ತಿ ನೀಡಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ಬೀಳುವುದು ಅನುಮಾನವಾಗಿದೆ. ಈ ಮಸೂದೆಗೆ ರಾಷ್ಟ್ರಪತಿಯವರ ಅಂಕಿತ ಪಡೆಯಲು ಪ್ರತಿಪಕ್ಷಗಳು ಸಹ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.