ನವದೆಹಲಿ: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಸಾಧಿಸಿದ್ದು, ಸರ್ಕಾರ ರಚನೆ ಸಂಬಂಧ ಪಕ್ಷದ ಅಧಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಉನ್ನತ ನಾಯಕರು ಇಂದು (ಮಂಗಳವಾರ) ಸಭೆ ನಡೆಸಿದ್ದಾರೆ.
ಮೂಲಗಳ ಪ್ರಕಾರ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ರೇವಂತ್ ರೆಡ್ಡಿ ಅವರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವ ಕುರಿತು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎನ್ನಲಾಗಿದೆ.
ರಾಹುಲ್ ಗಾಂಧಿ ಅವರು ಖರ್ಗೆ ನಿವಾಸಕ್ಕೆ ತೆರಳಿ ಸರ್ಕಾರ ರಚನೆ ಕುರಿತು ಮಾತುಕತೆ ನಡೆಸಿದ್ದಾರೆ. ಈ ವೇಳೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್, ತೆಲಂಗಾಣ ಉಸ್ತುವಾರಿ ಮಾಣಿಕ್‌ರಾವ್ ಠಾಕ್ರೆ ಸೇರಿದಂತೆ ಕೆಲ ಪ್ರಮುಖರು ಇದ್ದರು ಎಂದೂ ಮೂಲಗಳು ತಿಳಿಸಿವೆ.
ಹೊಸದಾಗಿ ಆಯ್ಕೆಯಾಗಿರುವ ಶಾಸಕರೊಂದಿಗೆ ರೆಡ್ಡಿ ಅವರು ಈಗಾಗಲೇ ಹೈದರಾಬಾದ್‌ನಲ್ಲಿ ಸಭೆ ನಡೆಸಿದ್ದಾರೆ.
119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನಡೆದ ಚುನಾವಣೆಯ ಫಲಿತಾಂಶ ಡಿಸೆಂಬರ್ 4ರಂದು ಪ್ರಕಟವಾಗಿದೆ. ಕಾಂಗ್ರೆಸ್ 64 ಕ್ಷೇತ್ರಗಳಲ್ಲಿ ಗೆದ್ದಿದ್ದರೆ, ಆಡಳಿತದಲ್ಲಿದ್ದ ಬಿಆರ್‌ಎಸ್ 39 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. ಉಳಿದಂತೆ ಬಿಜೆಪಿ 8, ಎಐಎಂಐಎಂ 7 ಮತ್ತು ಸಿಪಿಐ 1 ಕಡೆ ಗೆಲುವು ಕಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.