ನವದೆಹಲಿ: ಕೋಲ್ಕತ್ತದ ಸರ್ಕಾರಿ ಆರ್.ಜಿ. ಕರ್ ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯ ಕುರಿತು ‘ಎಕ್ಸ್’ನಲ್ಲಿ (ಟ್ವಿಟರ್) ತಪ್ಪು ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ಸಂಸದ ಸುಖೇಂದು ಶೇಖರ್ ರಾಯ್ ಅವರಿಗೆ ಪೊಲೀಸರು ಸಮನ್ಸ್ ನೀಡಿದ್ದಾರೆ.
‘ಕೋಲ್ಕತ್ತ ಪೊಲೀಸರಿಂದ ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡ ಕೇಂದ್ರೀಯ ತನಿಖಾ ದಳದ (ಸಿಬಿಐ) ಅಧಿಕಾರಿಗಳು ಕಟ್ಟುನಿಟ್ಟಾದ ತನಿಖೆ ನಡೆಸಬೇಕು. ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲರು ಮತ್ತು ಪೊಲೀಸ್ ಕಮಿಷನರ್ ಅವರನ್ನು ಕಸ್ಟಡಿಗೆ ಪಡೆದು ವಿಚಾರಣೆಗೆ ಒಳಪಡಿಸಬೇಕು. ಹಾಗೆಯೇ ಆಸ್ಪತ್ರೆಯ ಸಭಾಂಗಣದ ಗೋಡೆಯನ್ನು ಏಕೆ ಕೆಡವಲಾಯಿತು ಎಂಬುದರ ಬಗ್ಗೆ ಕೂಲಂಕಷವಾಗಿ ಪರಿಶೀಲನೆ ನಡೆಸಬೇಕು’ ಎಂದು ರಾಯ್ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದರು.
ಇದೇ ಪ್ರಕರಣ ಸಂಬಂಧ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಕೋಲ್ಕತ್ತ ಪೊಲೀಸರು ಬಿಜೆಪಿಯ ಮಾಜಿ ಸಂಸದೆ ಲಾಕೆಟ್ ಚಟರ್ಜಿ ಮತ್ತು ಇಬ್ಬರು ವೈದ್ಯರಿಗೆ ಸಮನ್ಸ್ ಜಾರಿ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಿಜೆಪಿ ಮಾಜಿ ಸಂಸದೆ ಲಾಕೆಟ್ ಚಟರ್ಜಿ, ಖ್ಯಾತ ಹೃದ್ರೋಗ ತಜ್ಞ ಡಾ.ಕುನಾಲ್ ಸರ್ಕಾರ್ ಮತ್ತು ಡಾ.ಸುವರ್ಣ ಗೋಸ್ವಾಮಿ ಅವರಿಗೆ ಸಮನ್ಸ್ ನೀಡಲಾಗಿದೆ. ಈ ಮೂವರಲ್ಲದೇ ಘಟನೆಯ ಬಗ್ಗೆ ತಪ್ಪು ಮಾಹಿತಿ ಹರಡಿದ 57 ಮಂದಿಗೆ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಆ.9ರಂದು ಕೋಲ್ಕತ್ತದ ಸರ್ಕಾರಿ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 31 ವರ್ಷದ ವೈದ್ಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಇದರ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.