ನವದೆಹಲಿ: ಅಯೋಧ್ಯೆಯಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಎರಡು ತಿಂಗಳ ಬಳಿಕ ವರದಿಯಾಗಿದೆ. ಪ್ರಕರಣದ ಆರೋಪಿಯು ‘ಮುಸ್ಲಿಂ’ ಎಂಬ ಕಾರಣಕ್ಕೆ ‘ತುಕ್ಡೆ ತುಕ್ಡೆ ಗ್ಯಾಂಗ್’ ಮೌನವಾಗಿದೆ ಎಂದು ‘ಇಂಡಿಯಾ’ ಮೈತ್ರಿಕೂಟದ ನಾಯಕರ ವಿರುದ್ಧ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
‘ಅತ್ಯಾಚಾರ ಪ್ರಕರಣ ಬಗ್ಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸಮಾಜವಾದಿ ಪಕ್ಷ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ಆರ್‌ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ‘ತುಕ್ಡೆ ತುಕ್ಡೆ’ ಗ್ಯಾಂಗ್‌ನ ಇತರ ಎಲ್ಲಾ ನಾಯಕರು ಮೌನವಾಗಿದ್ದಾರೆ. ಏಕೆಂದರೆ ಆರೋಪಿಯು ಮುಸ್ಲಿಂ ಸಮುದಾಯಕ್ಕೆ ಸೇರಿದವನಾಗಿದ್ದಾನೆ. ಸನಾತನ ಧರ್ಮದ ವಿರುದ್ಧ ಮಾತನಾಡಲು ಅವಕಾಶ ಸಿಕ್ಕಾಗ ಅವರೆಲ್ಲರೂ ಒಗ್ಗೂಡಿ ಮಾತನಾಡುತ್ತಾರೆ’ ಎಂದು ಸಿಂಗ್ ಟೀಕಿಸಿದ್ದಾರೆ.
ಅಯೋಧ್ಯೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಈಚೆಗೆ ವರದಿಯಾಗಿತ್ತು. ಈ ಕುರಿತು ಪ್ರತಿಕ್ರಿಯಿಸಿದ್ದ ಅಖಿಲೇಶ್ ಯಾದವ್, ಅಪರಾಧಿಯನ್ನು ಪತ್ತೆ ಹಚ್ಚಲು ಡಿಎನ್‌ಎ ಪರೀಕ್ಷೆ ನಡೆಸದೆ ಹೋದರೆ ಬಿಜೆಪಿಯ ಆರೋಪವನ್ನು ಪಕ್ಷಪಾತ ಎಂದು ಪರಿಗಣಿಸಲಾಗುತ್ತದೆ ಎಂದು ಹೇಳಿದ್ದರು.
‘ದೌರ್ಜನ್ಯ ಎಸಗಲು ಯಾವುದೇ ಜಾತಿ ಇಲ್ಲ. ಆರೋಪಿ ಪರವಾಗಿ ನಿಲ್ಲಬೇಡಿ ಎಂದು ನಾನು ಎಲ್ಲಾ ಪಕ್ಷಗಳಿಗೆ ಮನವಿ ಮಾಡುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳದಿದ್ದರೆ ಸಮಾಜವಾದಿ ಪಕ್ಷದ ಕಚೇರಿ ಎದುರು ಪ್ರತಿಭಟನೆ ನಡೆಸುತ್ತೇವೆ’ ಎಂದು ನಿಶಾದ್ ಪಕ್ಷ ಅಧ್ಯಕ್ಷ ಸಂಜಯ್ ನಿಶಾದ್ ಹೇಳಿದ್ದಾರೆ.
ಪ್ರಕರಣ ಸಂಬಂಧ ಜುಲೈ 30ರಂದು ಅಯೋಧ್ಯೆಯ ಪುರ ಕಲಂದರ್ ಪ್ರದೇಶದಲ್ಲಿ ಇಬ್ಬರು ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಯಿದ್ ಖಾನ್ ಮತ್ತು ಆತನ ಸಹಚರ ರಾಜು ಖಾನ್ ಎಂದು ಗುರುತಿಸಲಾಗಿದೆ.
ಸಂತ್ರಸ್ತೆಯ ಸಂಬಂಧಿಕರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ‘ಮೊಯಿದ್ ಖಾನ್ ಸಮಾಜವಾದಿ ಪಕ್ಷದ ಜತೆ ಗುರುತಿಸಿಕೊಂಡಿದ್ದಾನೆ. ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಆದರೂ ಆತನ ವಿರುದ್ಧ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.