ನರಸಿಂಗ್‌ಪುರ: ನಿರಂತರ ಮಳೆಯಿಂದಾಗಿ ಮನೆ ಕುಸಿದು ಒಂದೇ ಕುಟುಂಬದ ಇಬ್ಬರು ಮಕ್ಕಳು ಮೃತಪಟ್ಟು, ಐವರು ಗಾಯಗೊಂಡಿದ್ದಾರೆ. ಮಧ್ಯಪ್ರದೇಶದ ನರಸಿಂಗ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಗಾಡರ್‌ವಾರಾ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆ ನಡೆದ ಸಮಯದಲ್ಲಿ ಕುಟುಂಬದವರೆಲ್ಲರೂ ಮಲಗಿದ್ದರು. 3 ವರ್ಷದ ಬಾಲಕಿ ಹಾಗೂ 17 ವರ್ಷದ ಬಾಲಕ ಮೃತಪಟ್ಟಿದ್ದಾರೆ. ಅವಶೇಷಗಳ ಅಡಿ ಸಿಲುಕಿದ್ದ ಐವರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂಪುಟ ಸಚಿವ ಮತ್ತು ಸ್ಥಳೀಯ ಶಾಸಕ ರಾವ್ ಉದಯ್ ಪ್ರತಾಪ್ ಸಿಂಗ್, ಸಂತ್ರಸ್ತ ಕುಟುಂಬಕ್ಕೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸೌಲಭ್ಯ ಒದಗಿಸಲಾಗುವುದು. ಸದ್ಯ ಅವರಿಗೆ ಪಂಚಾಯತ್ ಕಟ್ಟಡದಲ್ಲಿ ಆಶ್ರಯ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಸಂತ್ರಸ್ತ ಕುಟುಂಬಕ್ಕೆ ತಕ್ಷಣವೇ ₹1 ಲಕ್ಷ ಆರ್ಥಿಕ ನೆರವು ನೀಡಲಾಗುವುದು ಎಂದೂ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.