ADVERTISEMENT

ಕಾಶ್ಮೀರ | ಶಂಕಿತ ಉಗ್ರರೊಂದಿಗೆ ಗುಂಡಿನ ಚಕಮಕಿ: ಯೋಧರಿಬ್ಬರು ಹುತಾತ್ಮ

ಪಿಟಿಐ
Published 14 ಸೆಪ್ಟೆಂಬರ್ 2024, 14:09 IST
Last Updated 14 ಸೆಪ್ಟೆಂಬರ್ 2024, 14:09 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ/ಶ್ರೀನಗರ: ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳ ಮೊದಲು ಕಾಶ್ಮೀರದಲ್ಲಿ ಶಂಕಿತ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆ. 

ಕಿಶ್ತವಾಢ್ ಜಿಲ್ಲೆಯಲ್ಲಿ ಶುಕ್ರವಾರ ಗುಂಡಿನ ಚಕಮಕಿ ನಡೆದಿದೆ ಎಂದು ಭಾರತೀಯ ಸೇನೆ ಹೇಳಿದೆ. ಪ್ರಾಣಾರ್ಪಣೆ ಮಾಡಿರುವ ಯೋಧರಿಗೆ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಭಾರತೀಯ ಸೇನೆ ಗೌರವ ಸಲ್ಲಿಸಿದೆ. 

ADVERTISEMENT

ಇದೇ ವೇಳೆ, ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಎನ್‌ಕೌಂಟರ್‌ ನಡೆಸಿ ಮೂವರು ಭಯೋತ್ಪಾದಕರನ್ನು ಶನಿವಾರ ಬೆಳಿಗ್ಗೆ ಹತ್ಯೆ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಯಾದ ಭಯೋತ್ಪಾದಕರ ಗುರುತು ಮತ್ತು ಅವರು ಯಾವ ಉಗ್ರ ಸಂಘಟನೆಯ ಜತೆಗೆ ನಂಟು ಹೊಂದಿದ್ದಾರೆ ಎಂಬುದನ್ನು ಪತ್ತೆ ಮಾಡಲಾಗುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ. 

ಉತ್ತರ ಕಾಶ್ಮೀರ ಜಿಲ್ಲೆಯ ಪಟ್ಟನ್ ಪ್ರದೇಶದ ಚಕ್ ಟಪ್ಪರ್ ಕ್ರೀರಿಯಲ್ಲಿ ಶುಕ್ರವಾರ ತಡರಾತ್ರಿಯೇ ಉಗ್ರರ ನಿಗ್ರಹಕ್ಕೆ ಶೋಧ ಕಾರ್ಯಾಚರಣೆ ಪ್ರಾರಂಭಿಸಲಾಯಿತು. ಈ ವೇಳೆ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದರು. ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದರು ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾರತೀಯ ಆಡಳಿತದ ಕಾಶ್ಮೀರದಲ್ಲಿ ದಶಕದ ನಂತರ ಮೊದಲ ಬಾರಿಗೆ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಚುನಾವಣೆಗೂ ಮುನ್ನ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆಗಳು ಹೆಚ್ಚುತ್ತಿವೆ. ಕಳೆದ ಎರಡು ವರ್ಷಗಳಲ್ಲಿ ಜಮ್ಮುವಿನಲ್ಲಿ ನಡೆದ ಘರ್ಷಣೆಗಳಲ್ಲಿ 50ಕ್ಕೂ ಹೆಚ್ಚು ಯೋಧರು ಹುತಾತ್ಮರಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.