ಶ್ರೀನಗರ: ಕಾಶ್ಮೀರದ ಬಡಗಾಮ್ ಜಿಲ್ಲೆಯ ಮಜಹಮಾ ಪ್ರದೇಶದಲ್ಲಿ ಶುಕ್ರವಾರ ಇಬ್ಬರು ವಲಸೆ ಕಾರ್ಮಿಕರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಕಳೆದ ಎರಡು ವಾರಗಳಲ್ಲಿ ಕಾಶ್ಮೀರ ಕಣಿವೆಯಲ್ಲಿ ವಲಸೆ ಕಾರ್ಮಿಕರನ್ನು ಗುರಿಯಾಗಿಸಿ ಉಗ್ರರು ನಡೆಸಿರುವ ನಾಲ್ಕನೇ ದಾಳಿ ಇದಾಗಿದೆ.
ಭಯೋತ್ಪಾದಕರ ಗುಂಡೇಟಿನಿಂದ ಗಾಯಗೊಂಡಿರುವ ಇಬ್ಬರು ಕಾರ್ಮಿಕರು ಉತ್ತರ ಪ್ರದೇಶದ ಸಂಜಯ್ ಮತ್ತು ಉಸ್ಮಾನ್ ಎಂದು ಗುರುತಿಸಲಾಗಿದೆ. ಜಲ ಜೀವನ್ ಯೋಜನೆಯಲ್ಲಿ ಕೂಲಿ ಕಾರ್ಮಿಕರಾಗಿ ಇವರು ಕೆಲಸದಲ್ಲಿ ತೊಡಗಿದ್ದರು. ಗಾಯಾಳುಗಳನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಗುಂಡಿನ ದಾಳಿ ನಡೆದ ತಕ್ಷಣ ಪೊಲೀಸರು ಮತ್ತು ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿದ್ದು, ಉಗ್ರರಿಗೆ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಅವರು ಅಕ್ಟೋಬರ್ 16ರಂದು ಅಧಿಕಾರ ವಹಿಸಿಕೊಂಡ ನಂತರ ಕಣಿವೆಯಲ್ಲಿ ವಲಸೆ ಕಾರ್ಮಿಕರು ಮತ್ತು ಭದ್ರತಾ ಪಡೆಗಳ ಮೇಲೆ ಭಯೋತ್ಪಾದಕ ದಾಳಿಗಳು ಹೆಚ್ಚುತ್ತಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.