ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು (ಭಾನುವಾರ) ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಸ್ಥಿತಿ ಪರಿಶೀಲನೆ ನಡೆಸಲಿದ್ದಾರೆ.
ಜೂನ್ 29ರಂದು ಆರಂಭವಾಗಲಿರುವ ವಾರ್ಷಿಕ ಅಮರನಾಥ ಯಾತ್ರೆಯ ತಯಾರಿಗಳನ್ನೂ ಇದೇ ವೇಳೆ ಅವರು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಶಾ ಅವರು ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆದಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋಭಾಲ್, ಸೇನಾ ಪಡೆ ಮುಖ್ಯಸ್ಥ ಮನೋಜ್ ಪಾಂಡೆ, ಕೇಂದ್ರ ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಭಲ್ಲಾ, ಗುಪ್ತಚರ ದಳದ ನಿರ್ದೇಶಕ ತಾಪಕ್ ದೆಕಾ, ಸಿಆರ್‌ಪಿಎಫ್ ಮಹಾ ನಿರ್ದೇಶಕ ಅನೀಶ್ ದಯಾಳ್ ಸಿಂಗ್, ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ಆರ್.ಆರ್.ಸ್ವೇಯ್ನ್ ಹಾಗೂ ಇತರ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿ ನುಸುಳುವಿಕೆ, ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದಂತೆ ಶಾ ಅವರು ನಿರ್ದೇಶನಗಳನ್ನು ನೀಡುವ ಸಾಧ್ಯತೆ ಇದೆ.
ಇಲ್ಲಿನ ರಿಯಾಸಿ ಜಿಲ್ಲೆಯಲ್ಲಿ ಅಮರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಉಗ್ರರು ಕಳೆದವಾರ ಗುಂಡಿನ ದಾಳಿ ನಡೆಸಿದ್ದರು. ದಾಳಿಯಿಂದಾಗಿ, 9 ಮಂದಿ ಯಾತ್ರಾರ್ಥಿಗಳು ಮೃತಪಟ್ಟು, 33 ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಶಾ ಸಭೆ ಮಹತ್ವ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.