ಬೆಂಗಳೂರು: ‘ಯಾರೋ ತಮಿಳುನಾಡಿನಿಂದ ಬಂದು ದಿ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇರಿಸಿ ಹೋಗುತ್ತಾರೆ’ ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆಗೆ ವಿವಿಧ ತಮಿಳು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿರುವ ಬೆನ್ನಲ್ಲೇ ಶೋಭಾ ಅವರು ಕ್ಷಮೆಯಾಚಿಸಿದ್ದಾರೆ.
ಮೊಬೈಲ್ ಅಂಗಡಿ ಮಾಲೀಕನ ಮೇಲೆ ಹಲ್ಲೆ ಪ್ರಕರಣ ಖಂಡಿಸಿ ನಗರ್ತಪೇಟೆಯಲ್ಲಿ ಬಿಜೆಪಿ ಹಾಗೂ ಹಿಂದೂ ಜಾಗರಣಾ ವೇದಿಕೆ ಆಯೋಜಿಸಿದ್ದ ಪ್ರತಿಭಟನಾ ರ್‍ಯಾಲಿಯಲ್ಲಿ ಮಾತನಾಡಿದ್ದ ಅವರು, ‘ವಿಧಾನಸೌಧ ಆವರಣಕ್ಕೆ ಯಾರೋ ಬಂದು ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುತ್ತಾರೆ. ಮತ್ತೊಬ್ಬ ಹೆಣ್ಣು ಮಕ್ಕಳ ಮೇಲೆ ಆ್ಯಸಿಡ್ ದಾಳಿ ನಡೆಸುತ್ತಾನೆ. ಸ್ವಂತ ಅಂಗಡಿಯಲ್ಲಿ ಹನುಮಾನ್ ಚಾಲೀಸಾ ಸಿ.ಡಿ ಹಾಕಿದ್ದಕ್ಕೆ ಯುವಕನ ಮೇಲೆ ಇನ್ನೊಂದು ಗುಂಪು ಹಲ್ಲೆ ನಡೆಸುತ್ತದೆ. ಯಾರೋ ತಮಿಳುನಾಡಿನಿಂದ ಬಂದು ಬಾಂಬ್ ಇರಿಸಿ ಹೋಗುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ’ ಎಂದು ಹೇಳಿದ್ದರು.
ಈ ಹೇಳಿಕೆಯು ತಮಿಳುನಾಡಿನವರನ್ನು ಅವಮಾನಿಸುವಂತಹದ್ದು ಎಂಬ ಆಕ್ಷೇಪ ವ್ಯಕ್ತವಾಗಿತ್ತು. ಈ ಸಂಬಂಧ, ತಮಿಳುನಾಡಿನಲ್ಲಿ ದೂರು ದಾಖಲಾಗಿತ್ತು.
ತಮ್ಮ ಮಾತು ವಿವಾದದ ಸ್ವರೂಪ ಪಡೆಯುತ್ತಿದ್ದಂತೆ, ಹೇಳಿಕೆ ಹಿಂಪಡೆಯುವುದಾಗಿ ಹೇಳಿದ ಶೋಭಾ, ‘ತಮಿಳು ಸಹೋದರ, ಸಹೋದರಿಯರಿಗೆ ನನ್ನ ಮಾತಿನಿಂದ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ನನ್ನ ಹೇಳಿಕೆ ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ತರಬೇತಿ ಪಡೆದವರಿಗೆ ಮಾತ್ರ ಸೀಮಿತವಾಗಿದೆ. ರಾಮೇಶ್ವರ ಕೆಫೆ ಘಟನೆಗೂ ಆ ತರಬೇತಿಗೂ ಸಂಬಂಧ ಇದೆ. ಆದರೆ, ತಮಿಳುನಾಡಿನ ಜನರಲ್ಲಿ ನನ್ನ ಹೃದಯಾಂತರಾಳದಿಂದ ಕ್ಷಮೆ ಕೋರುತ್ತೇನೆ’ ಎಂದಿದ್ದಾರೆ.
24 ಗಂಟೆಯಲ್ಲಿ ವರದಿ: ತುಷಾರ್ ‘ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ತಮಿಳರ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನಲಾಗಿರುವ ಬಗ್ಗೆ ಚುನಾವಣೆ ಆಯೋಗಕ್ಕೆ ದೂರು ನೀಡಲಾಗಿದ್ದು ಅವರಿಂದ ತನಿಖೆ ನಡೆಸಲು ನಮಗೆ ಆದೇಶ ಬಂದಿದೆ. 24 ಗಂಟೆಗಳೊಳಗೆ ಈ ಬಗ್ಗೆ ಪರಿಶೀಲನೆ ನಡೆಸಿ ವರದಿ ಸಲ್ಲಿಸಲಾಗುತ್ತದೆ’ ಎಂದು ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.