ಫಿರೋಜಾಬಾದ್ (ಉತ್ತರಪ್ರದೇಶ): ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮೂರು ವರ್ಷದ ಮಗು, ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮೃತರನ್ನು ಮೀರಾದೇವಿ (45), ಅಮನ್ (20), ಗೌತಮ್ ಕುಶ್ವಾಹ (18) ಮತ್ತು ಕುಮಾರಿ ಇಚ್ಚಾ (3) ಎಂದು ಗುರುತಿಸಲಾಗಿದೆ.
ಸೋಮವಾರ ರಾತ್ರಿ ಶಿಕೋಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ನೌಶೇರಾ ಪ್ರದೇಶದಲ್ಲಿರುವ ಕಾರ್ಖಾನೆಯ ಗೋದಾಮಿನಲ್ಲಿ ಈ ಘಟನೆ ನಡೆದಿದ್ದು, 6 ಮಂದಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇಲ್ಲಿಯವರೆಗೆ ಸುಮಾರು 10 ಜನರನ್ನು ರಕ್ಷಿಸಲಾಗಿದೆ. ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಸಾಧ್ಯತೆಯಿದೆ ಎಂದು ಆಗ್ರಾ ವ್ಯಾಪ್ತಿಯ ಐಜಿ ದೀಪಕ್ ಕುಮಾರ್ ತಿಳಿಸಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದೂ ಅವರು ಹೇಳಿದ್ದಾರೆ.
ಸೋಮವಾರ ರಾತ್ರಿ 10.30ರ ಸುಮಾರಿಗೆ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದೆ. ಇದರಿಂದಾಗಿ ಕಟ್ಟಡದ ಗೋಡೆಗಳು ಕುಸಿದು ಅದರಲ್ಲಿ ವಾಸಿಸುತ್ತಿದ್ದ ಒಂದೇ ಕುಟುಂಬದ 7 ಜನ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡ ಕೂಡ ಆಗಮಿಸಲಿದ್ದು, ರಕ್ಷಣಾ ಕಾರ್ಯ ನಡೆಸಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.