ADVERTISEMENT

ಬಹರಾಇಚ್ ಗಲಭೆ: ಬುಲ್ಡೋಜರ್ ಕ್ರಮ ಇಲ್ಲ;ಸುಪ್ರೀಂ ಕೋರ್ಟ್‌ಗೆ ಉತ್ತರ ಪ್ರದೇಶ ಭರವಸೆ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2024, 15:49 IST
Last Updated 22 ಅಕ್ಟೋಬರ್ 2024, 15:49 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ಬಹರಾಇಚ್ ಜಿಲ್ಲೆಯಲ್ಲಿ ಹಿಂಸಾಚಾರದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವವರ ವಿರುದ್ಧ ‘ಬುಲ್ಡೋಜರ್ ಕ್ರಮ’ ಕೈಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿದೆ.

ಪ್ರಕರಣದ ವಿಚಾರಣೆಯು ಬುಧವಾರ ಮುಂದುವರಿಯಲಿದ್ದು, ಅಲ್ಲಿಯವರೆಗೆ ರಾಜ್ಯ ಸರ್ಕಾರವು ಯಾವುದೇ ಕ್ರಮ ಜರುಗಿಸಬಾರದು ಎಂದು ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ. ವಿಶ್ವನಾಥನ್ ಅವರು ಇರುವ ಪೀಠವು ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಅವರಿಗೆ ಸೂಚಿಸಿತು. ನಟರಾಜ್ ಅವರು ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಿದ್ದರು.

ಹಿಂಸಾಚಾರದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ವ್ಯಕ್ತಿಗಳ ವಿರುದ್ಧ, ಅವರಿಗೆ ಸೇರಿದ ಕಟ್ಟಡಗಳ ನಿರ್ಮಾಣ ಅಕ್ರಮ ಎಂದು ಕ್ರಮ ಜರುಗಿಸಲು ಉತ್ತರ ಪ್ರದೇಶ ಸರ್ಕಾರವು ಮುಂದಾಗಿದೆ ಎಂದು ಹಿರಿಯ ವಕೀಲ ಸಿ.ಯು. ಸಿಂಗ್ ಮತ್ತು ಇತರರು ಪೀಠಕ್ಕೆ ಮಾಹಿತಿ ನೀಡಿದರು.

ADVERTISEMENT

‘ಈ ನ್ಯಾಯಾಲಯ ನೀಡಿರುವ ಸೂಚನೆಗಳ ಬಗ್ಗೆ ನಿಮಗೆ ಗೊತ್ತಿದೆ. ರಾಜ್ಯ ಸರ್ಕಾರವು ಸೂಚನೆಗಳನ್ನು ಉಲ್ಲಂಘಿಸುವುದರಿಂದ ಆಗುವ ಅಪಾಯ ಮೈಮೇಲೆ ಎಳೆದುಕೊಳ್ಳಲು ಬಯಸಿದ್ದರೆ, ಅದು ಅವರ ಆಯ್ಕೆಯಾಗಿರುತ್ತದೆ’ ಎಂದು ಪೀಠ ಹೇಳಿತು.

ಬಹರಾಇಚ್ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮೂವರಿಗೆ, ಕಟ್ಟಡ ಧ್ವಂಸಗೊಳಿಸುವ ನೋಟಿಸ್ ನೀಡಲಾಗಿದೆ. ಉತ್ತರ ಪ್ರದೇಶದ ಲೋಕೋಪಯೋಗಿ ಇಲಾಖೆಯು ಈ ನೋಟಿಸ್ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.