ಲಖನೌ/ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವಾರ್ಡ್‌ನಲ್ಲಿ ಬೆಂಕಿ ಹೊತ್ತಿಕೊಂಡು 10 ಶಿಶುಗಳು ಮೃತಪಟ್ಟ ಪ್ರಕರಣ ಕುರಿತು ಮೂರು ಹಂತದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಶನಿವಾರ ಆದೇಶಿಸಿದೆ.
ವೈದ್ಯಕೀಯ ಶಿಕ್ಷಣ ಮತ್ತು ತರಬೇತಿಯ ಮಹಾ ನಿರ್ದೇಶಕರ ನೇತೃತ್ವದಲ್ಲಿ ನಾಲ್ಕು ಜನರ ಸಮಿತಿಯನ್ನು ರಚಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣವನ್ನು ತಿಳಿಯಲು ಹಾಗೂ ಘಟನೆಯ ಹಿಂದೆ ನಿರ್ಲಕ್ಷ್ಯವಿದೆಯೇ ಎಂಬ ಕುರಿತು ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.
ಅಗ್ನಿಶಾಮಕ ದಳವೂ ಘಟನೆಯ ಕಾರಣಗಳ ಕುರಿತು ಪರಿಶೀಲನೆ ನಡೆಸಲಿದೆ. ಇದರೊಂದಿಗೆ ಮ್ಯಾಜಿಸ್ಟ್ರೇಟ್ ತನಿಖೆಗೂ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಬ್ರಿಜೇಶ್ ಪಾಠಕ್ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ ಖಾತೆಯಲ್ಲಿ ತಿಳಿಸಿದ್ದಾರೆ.
ಘಟನೆ ಕುರಿತು 12 ಗಂಟೆಯ ಒಳಗೆ ವರದಿ ನೀಡುವಂತೆ ಈಗಾಗಲೇ ಅಧಿಕಾರಿಗಳಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದರು.
ಬುಂದೇಲ್‌ಖಂಡ ಪ್ರದೇಶದಲ್ಲಿರುವ, ರಾಜ್ಯದ ಅತಿದೊಡ್ಡ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದಾದ ಲಕ್ಷ್ಮೀ ಬಾಯಿ ವೈದ್ಯಕೀಯ ಕಾಲೇಜಿನ ‘ನವಜಾತ ಶಿಶುಗಳ ತೀವ್ರ ನಿಗಾ ಘಟಕ’ದಲ್ಲಿ (ಎನ್ಐಸಿಯು) ಶುಕ್ರವಾರ ರಾತ್ರಿ 10.45ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಘಟನೆ ನಡೆದ ವೇಳೆ 52 ರಿಂದ 54 ಶಿಶುಗಳು ವಾರ್ಡ್‌ನಲ್ಲಿದ್ದವು. ಈ ಪೈಕಿ 10 ಶಿಶುಗಳು ಮೃತಪಟ್ಟಿದ್ದರೆ, ಗಾಯಗೊಂಡಿರುವ 16 ಶಿಶುಗಳಿಗೆ ಚಿಕಿತ್ಸ ನೀಡಲಾಗುತ್ತಿದೆ. ಉಳಿದು ಶಿಶುಗಳನ್ನು ರಕ್ಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಅವಧಿ ಮೀರಿದ ಅಗ್ನಿಶಾಮಕ ಉಪಕರಣಗಳಿದ್ದವು. ಇವುಗಳಿಂದಲೇ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ ಇದನ್ನು ಸಂಪೂರ್ಣವಾಗಿ ತಳ್ಳಿ ಹಾಕಿದ ಬ್ರಿಜೇಶ್ ಪಾಠಕ್ ಅವರು ‘ಎಲ್ಲಾ ಉಪಕರಣಗಳೂ ಉತ್ತಮವಾಗಿಯೇ ಇದ್ದವು. ಫೆಬ್ರವರಿಯಲ್ಲಿ ಅಗ್ನಿ ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಗಿತ್ತು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಘಟನೆಯ ಮಾಹಿತಿ ಬಂದ ತಕ್ಷಣವೇ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಉಪ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಕಾರ್ಯದರ್ಶಿಯನ್ನು ಸ್ಥಳಕ್ಕೆ ಕಳುಹಿಸಿದರು ಎಂದು ರಾಜ್ಯ ಸರ್ಕಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಏಳು ಶಿಶುಗಳ ಮರಣೋತ್ತರ ಪರೀಕ್ಷೆಯನ್ನು ಶನಿವಾರ ನಡೆಸಲಾಗಿದೆ. ಆದರೆ ಉಳಿದ ಮೂರು ಶಿಶುಗಳ ಪೋಷಕರು ಪತ್ತೆಯಾಗದ ಕಾರಣ ಅವುಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜ್ಞಾನೇಂದ್ರ ಕುಮಾರ್ ಸಿಂಗ್ ತಿಳಿಸಿದರು.
₹7 ಲಕ್ಷ ಪರಿಹಾರ ಘೋಷಣೆ
ಘಟನೆಯಲ್ಲಿ ಮೃತಪಟ್ಟ ಶಿಶುಗಳ ಪೋಷಕರಿಗೆ ತಲಾ ₹7 ಲಕ್ಷ ಪರಿಹಾರ ಘೋಷಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ತಲಾ ₹2 ಲಕ್ಷ ಘೋಷಿಸಿದ್ದರೆ ರಾಜ್ಯ ಸರ್ಕಾರ ತಲಾ ₹5 ಲಕ್ಷ ಘೋಷಿಸಿದೆ. ಗಾಯಗೊಂಡವರಿಗೆ ತಲಾ ₹50000 ನೀಡಲಾಗುತ್ತದೆ.
ರಾಜ್ಯದಲ್ಲಿ ಒಂದಾದರ ಮೇಲೆ ಒಂದರಂತೆ ಇಂತಹ ಘಟನೆಗಳು ನಡೆಯುತ್ತಲೇ ಇವೆ. ಇದಕ್ಕೆಲ್ಲ ಸರ್ಕಾರ ಮತ್ತು ಆಡಳಿತದ ನಿರ್ಲಕ್ಷ್ಯವೇ ಕಾರಣ–ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕ
ಚುನಾವಣಾ ಪ್ರಚಾರ ಬಿಟ್ಟು ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಸೌಲಭ್ಯಗಳನ್ನು ಸುಧಾರಿಸುವತ್ತ ಸಿ.ಎಂ ಗಮನಹರಿಸಬೇಕು. ಮೃತ ಶಿಶುಗಳ ಕುಟುಂಬಸ್ಥರಿಗೆ ₹1 ಕೋಟಿ ಪರಿಹಾರ ನೀಡಬೇಕು– ಅಖಿಲೇಶ್ ಯಾದವ್, ಸಮಾಜವಾದಿ ಪಕ್ಷದ ಮುಖ್ಯಸ್ಥ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.