ಬಲರಾಮ್‌ಪುರ: ಸಮಾಜವಾದಿ ಪಕ್ಷದ ಮುಖಂಡ ಮತ್ತು ತುಳಸಿಪುರದ ನಗರ ಪಂಚಾಯತ್‌ನ ಮಾಜಿ ಅಧ್ಯಕ್ಷ ಫಿರೋಜ್ ಪಪ್ಪು ಅವರನ್ನು ಆಗಂತುಕ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಕೃತ್ಯವು ಮಂಗಳವಾರ ರಾತ್ರಿ ಸಂಭವಿಸಿದೆ. ಹತ್ಯೆ ಸುದ್ದಿ ವ್ಯಾಪಿಸುತ್ತಿದ್ದಂತೆ ತುಳಸಿಪುರದಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದೆ.
'41 ವರ್ಷದ ಫಿರೋಜ್ ಪಪ್ಪು ಜರ್ವಾದಿಂದ ಮನೆಗೆ ಹಿಂತಿರುಗುವ ಸಂದರ್ಭ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಗಂಭೀರ ಗಾಯಗೊಂಡಿದ್ದ ಫಿರೋಜ್ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ' ಎಂದು ಪೊಲೀಸರು ತಿಳಿಸಿದ್ದಾರೆ.
ಫಿರೋಜ್ ಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಬೆಂಬಲಿಗರು ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಹೇಮಂತ್ ಕುತಿಯಾಲ್ ಸ್ಥಳಕ್ಕೆ ಆಗಮಿಸಿದ್ದು, ಪ್ರತಿಭಟನಾಕಾರರ ಮನವೊಲಿಸಿ ವಾಪಸ್ ಕಳುಹಿಸಿದ್ದಾರೆ.
ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಉದ್ವಿಗ್ನಗೊಂಡ ಪ್ರದೇಶದಲ್ಲಿ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದೆ.
ಫಿರೋಜ್ ಪಪ್ಪು ಅವರ ಪತ್ನಿ ಕಹ್ಕಾಶನ್ ಅವರು ತುಳಸಿಪುರ ನಗರ ಪಂಚಾಯತ್‌ನ ಹಾಲಿ ಅಧ್ಯಕ್ಷೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.