ಡೆಹ್ರಾಡೂನ್: ಉತ್ತರಾಖಂಡದಲ್ಲಿ ಕೊಲೆಯಾದ ರೆಸಾರ್ಟ್ ಸ್ವಾಗತಕಾರಿಣಿಅಂಕಿತಾಭಂಡಾರಿ ಅವರ ಕುಟುಂಬಕ್ಕೆ ಬುಧವಾರ ₹ 25 ಲಕ್ಷ ನೆರವು ಘೋಷಿಸಿರುವ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ತ್ವರಿತಗತಿ ನ್ಯಾಯಾಲಯದಲ್ಲಿಪ್ರಕರಣದ ವಿಚಾರಣೆ ನಡೆಸಲಾಗುವುದು ಎಂದು ಭರವಸೆ ನೀಡಿದ್ದಾರೆ.
ಅಂಕಿತಾ ಕುಟುಂಬಕ್ಕೆ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ. ಪ್ರಕರಣವನ್ನು ಎಸ್‌ಐಟಿ (ವಿಶೇಷ ತನಿಖಾ ತಂಡ) ತನಿಖೆ ನಡೆಸುತ್ತಿದೆ. ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಿ ಸಾಧ್ಯವಾದಷ್ಟು ಬೇಗ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಕೊಲೆಗಡುಕರಿಗೆ ಅತ್ಯಂತ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು ಎಂದರು.
ಹತ್ಯೆ ಪ್ರಕರಣವನ್ನು ಎಲ್ಲಾ ಕೋನಗಳಿಂದ ಸಂಪೂರ್ಣ ತನಿಖೆ ನಡೆಸಲಾಗುತ್ತಿದ್ದು, ಹಂತಕರನ್ನು ಆದಷ್ಟು ಬೇಗ ನೇಣುಗಂಬಕ್ಕೆ ಕಳುಹಿಸಲಾಗುವುದು ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ರೆಸಾರ್ಟ್ ಮಾಲೀಕ ಪುಲ್ಕಿತ್ ಆರ್ಯ ಸೇರಿದಂತೆ ಮೂವರು ಆರೋಪಿಗಳನ್ನು ಘಟನೆ ನಡೆದ 24 ಗಂಟೆಗಳ ಒಳಗೆ ಬಂಧಿಸಲಾಯಿತು.ಡಿಐಜಿ ಮಟ್ಟದ ಅಧಿಕಾರಿ ನೇತೃತ್ವದ ಎಸ್‌ಐಟಿ ತ್ವರಿತವಾಗಿ ಸಾಕ್ಷ್ಯಾಧಾರ ಸಂಗ್ರಹಿಸುತ್ತಿದೆ. ಅದರ ಆಧಾರದ ಮೇಲೆ ನ್ಯಾಯಾಲಯದಲ್ಲಿ ತಪ್ಪಿತಸ್ಥರನ್ನು ಗಲ್ಲಿಗೇರಿಸುವಂತೆ ಮನವಿ ಮಾಡಬಹುದು’ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿ ಮಾಹಿತಿ ನೀಡಿದರು.
’ಅಂಕಿತಾ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ’ ಎಂದು ಋಷಿಕೇಶದ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನ (ಎಐಐಎಂಎಸ್) ನಾಲ್ವರು ವೈದ್ಯರ ಸಮಿತಿ ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿಸಿದೆ.
ಆಕೆಯ ಮೊಣಕೈ, ಬೆನ್ನು ಮತ್ತು ಬೆರಳುಗಳ ಮೇಲೆ ಗಾಯದ ಗುರುತುಗಳು ಇದ್ದವು. ಏಕೆಂದರೆ ಅವಳನ್ನು ಎಳೆದಾಡಲಾಗಿತ್ತು. ಆಕೆ ಮೇಲೆ ಅತ್ಯಾಚಾರ ನಡೆದಿಲ್ಲ.ಆದಾಗ್ಯೂ, ದೇಹದ ಭಾಗಗಳ ಮಾದರಿಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.