ಹರಿದ್ವಾರ: ಸದ್ಯ ಆರಂಭವಾಗಲಿರುವ ಹರಿದ್ವಾರದ ಮಹಾಕುಂಭ ಮೇಳಕ್ಕೆ ಹಾಜರಾಗುವವರಿಗೆ ಕೆಲವು ಕೋವಿಡ್-19 ನಿರ್ಬಂಧಗಳನ್ನು ಸಡಿಲಗೊಳಿಸುವ ಉತ್ತರಾಖಂಡದ ಮುಖ್ಯಮಂತ್ರಿ ತೀರಥ್ ಸಿಂಗ್ ರಾವತ್ ಅವರ ನಿರ್ಧಾರಕ್ಕೆ ಮಾಜಿ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಮತ್ತೊಮ್ಮೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಮತ್ತೆ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ವೈರಸ್ ವಿರುದ್ಧ ತೆಗೆದುಕೊಳ್ಳಬೇಕಾಗಿದೆ ಎಂದು ತ್ರಿವೇಂದ್ರ ಸಿಂಗ್ ರಾವತ್ ಹೇಳಿದರು.
ಮಹಾಕುಂಭ ಮೇಳಕ್ಕಾಗಿ ಹರಿದ್ವಾರಕ್ಕೆ ಆಗಮಿಸಲು 72 ಗಂಟೆಗಳ ಮೊದಲು ಯಾತ್ರಾರ್ಥಿಗಳು ಕೋವಿಡ್-19 ನೆಗೆಟಿವ್ ವರದಿಗಳನ್ನು ಸಲ್ಲಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ರಾವತ್ ಘೋಷಿಸಿದ ಹಿನ್ನೆಲೆಯಲ್ಲಿ ತ್ರಿವೇಂದ್ರ ಸಿಂಗ್ ರಾವತ್ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವು ಕೋವಿಡ್-19 ಅನ್ನು ಗಂಭೀರವಾಗಿ ಪರಿಗಣಿಸಿದ ನಂತರ ಎಚ್ಚರಿಕೆಯಿಂದ ಕೊರೊನಾ ವೈರಸ್ ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ ಹೊಸ ಸಿಎಂ ನೆಗೆಟಿವ್ ವರದಿಯ ಅಗತ್ಯವನ್ನು ದೂರ ಮಾಡುವ ಬಗ್ಗೆ ಮಾತನಾಡಿದ್ದಾರೆ ಎಂದಿದ್ದಾರೆ.
ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ ಮತ್ತು ಅದನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ ಎಂದು ಮಾಜಿ ಸಿಎಂ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.