ನವದೆಹಲಿ:ದೆಹಲಿಯ ವಾಯುವ್ಯ ಭಾಗದ ಜಹಾಂಗೀರ್‌ಪುರಿ ಪ್ರದೇಶದಲ್ಲಿ ಶನಿವಾರ ನಡೆದ 'ಹನುಮಾನ್' ಜಯಂತಿಯ ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆದಿದ್ದು, ಹಿಂಸಾಚಾರ ಭುಗಿಲೆದ್ದಿದೆ.
ಘಟನೆಯಲ್ಲಿ ಹಲವು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದು, ಉದ್ರಿಕ್ತ ಜನರು ಕೆಲವು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದೆ. ಹೀಗಾಗಿ ಸ್ಥಳದಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ರಾಷ್ಟ್ರ ರಾಜಧಾನಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದು ಕೇಂದ್ರದ ಜವಾಬ್ದಾರಿಯಾಗಿದೆ. ಆದರೂ, ಜನರು ಶಾಂತಿ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದು ಸುದ್ದಿಸಂಸ್ಥೆ ಪಿಟಿಐಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ.
ಈ ಹಿಂಸಾಚಾರದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ದೆಹಲಿಯ ಇಬ್ಬರು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ ಮತ್ತು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.