ನವದೆಹಲಿ: ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಯುವಕರ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಿಡಿಗೇಡಿಗಳು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಘಟನಾ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಬುಧವಾರ ಸಂಜೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಕ್ರಮೇಣ ಹಿಂಸಾತ್ಮಕ ಸ್ವರೂಪ ಪಡೆದುಕೊಡಿದ್ದು, ಉದ್ರಿಕ್ತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಜತೆಗೆ ಸ್ಥಳದಲ್ಲಿದ್ದ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ.
ಕೋಮು ಸಂಘರ್ಷ ನಡೆಯುವುದನ್ನು ತಡೆಯುವ ಉದ್ದೇಶದಿಂದ ಔರಂಗಾಬಾದ್‌ನಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ಕಮಿಷನರ್ ನಿಖಿಲ್ ಗುಪ್ತಾ ಹೇಳಿದ್ದಾರೆ.
ಘರ್ಷಣೆಯಲ್ಲಿ 500 ರಿಂದ 600 ಮಂದಿ ಯುವಕರು ಭಾಗಿಯಾಗಿದ್ದು, ಇನ್ನೂ ಗುರುತು ಪತ್ತೆಯಾಗಿಲ್ಲ. ಪ್ರಸಿದ್ಧ ರಾಮ ಮಂದಿರವಿರುವ ಕಿರಾದ್‌ಪುರದಲ್ಲಿ ಈ ಘಟನೆ ನಡೆದಿದೆ ಎಂದು ಗುಪ್ತಾ ತಿಳಿಸಿದ್ದಾರೆ.
‘ಕೃತ್ಯದಲ್ಲಿ ಭಾಗಿಯಾಗಿದ್ದ ಯುವಕರ ಪತ್ತೆಗಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸುಮಾರು ಒಂದು ಗಂಟೆ ಕಾಲ ನಡೆದ ಘರ್ಷಣೆಯಲ್ಲಿ ಆರರಿಂದ ಏಳು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾಚಾರಕ್ಕೆ ಪ್ರಚೋದನೆ ನೀಡಿದವರನ್ನು ಬಂಧಿಸಲು 10 ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಗುಪ್ತಾ ‘ಪಿಟಿಐ’ಗೆ ತಿಳಿಸಿದ್ದಾರೆ.
ಸ್ಥಳೀಯ ಸಂಸದ ಇಮ್ತಿಯಾಜ್ ಜಲೀಲ್, ರಾಜ್ಯ ಬಿಜೆಪಿ ಸಚಿವ ಅತುಲ್ ಸೇವ್ ಸೇರಿದಂತೆ ಗಣ್ಯರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.