ವಯನಾಡ್/ತಿರುವನಂತಪುರ (ಕೇರಳ): ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 148ಕ್ಕೆ ಏರಿಕೆಯಾಗಿದೆ. ಇನ್ನೂ ನೂರಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಎನ್‌ಡಿಆರ್‌ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಭೀಕರ ದುರಂತದಿಂದಾಗಿ ಜಿಲ್ಲೆಯ ಮೇಪ್ಪಾಡಿ ಪಟ್ಟಣ ವ್ಯಾಪ್ತಿಯ ಮುಂಡಕ್ಕೈ, ಚೂರಲ್‌ಮಲ, ಅಟ್ಟಮಲ ಹಾಗೂ ಸಮೀಪದ ನೂಲ್ಪುಳ ಗ್ರಾಮಗಳು ಅಕ್ಷರಶಃ ಕೊಚ್ಚಿಹೋಗಿವೆ. ಘಟನೆಯಲ್ಲಿ 130ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಮಲಪ್ಪುರಂ ಜಿಲ್ಲೆಯ ನಿಲಂಬೂರ್ ಬಳಿಯ ಪೋತುಕಲ್‌ನಲ 40 ಕಿ.ಮೀ ದೂರದಲ್ಲಿ ಮಕ್ಕಳು ಸೇರಿದಂತೆ ಮಹಿಳೆಯರು, ವೃದ್ಧರ ಅನೇಕ ಶವಗಳು ಪತ್ತೆಯಾಗಿವೆ. ಮೃತದೇಹಗಳು ಛಿದ್ರ ಛಿದ್ರವಾಗಿದ್ದು, ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇಪ್ಪಾಡಿ ಭಾಗದಲ್ಲಿ ಕಳೆದೆರಡು ದಿನಗಳಿಂದ 200 ಮಿ.ಮೀ ವರೆಗೆ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪೀಡಿತರನ್ನು ಜಿಲ್ಲಾಡಳಿತ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಿದೆ. 2019ರ ಆಗಸ್ಟ್‌ನಲ್ಲಿ ಮೇಪ್ಪಾಡಿ ಭಾಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ 17 ಮಂದಿ ಸಾವಿಗೀಡಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.